
ಬೆಂಗಳೂರು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ಆರೋಗ್ಯ ಸೌಧದಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ನಡೆದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ ಭ್ರೂಣ ಹತ್ಯೆ ತಡೆಗೆ ಸರ್ಕಾರ ಕಾನೂನಿನಡಿ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಭ್ರೂಣ ಲಿಂಗ ಪತ್ತೆಗೆ ಸಂಬಂಧಿಸಿದಂತೆ ಮಾಹಿತಿ ನೀಡುವವರಿಗೆ ನೀಡುತ್ತಿದ್ದ ಬಹುಮಾನವನ್ನು ₹50 ಸಾವಿರದಿಂದ ₹1 ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಪ್ರಸ್ತುತ 1000:947 ಪುರುಷ–ಸ್ತ್ರೀ ಅನುಪಾತ ಇರುವುದರಿಂದ ಇದನ್ನು ಸರಿಪಡಿಸದಿದ್ದರೆ ಗಂಭೀರ ಸಾಮಾಜಿಕ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು. ಈ ಹಿನ್ನೆಲೆಯಲ್ಲಿ ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆಯಡಿ ಯಶಸ್ವಿ ಗುಪ್ತ ಕಾರ್ಯಾಚರಣೆಗಳಿಗೆ ಸಹಕರಿಸುವವರಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಹೇಳಿದರು.
ಸ್ತ್ರೀಯರ ಆರೋಗ್ಯ ರಕ್ಷಣೆಗೆ ಇಲಾಖೆ ಹಲವು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿದೆ. ‘ಅನಿಮೀಯಾ ಮುಕ್ತ ಪೌಷ್ಟಿಕ ಕರ್ನಾಟಕ’, ‘ಶುಚಿ’, ‘ಜನನಿ ಸುರಕ್ಷಾ’ ಯೋಜನೆಗಳ ಮೂಲಕ ಹೆಣ್ಣುಮಕ್ಕಳ ಆರೋಗ್ಯ ಸುಧಾರಣೆಗೆ ಕ್ರಮ ವಹಿಸಲಾಗಿದೆ. ಇದುವರೆಗೆ 19.64 ಲಕ್ಷ ಹೆಣ್ಣುಮಕ್ಕಳಿಗೆ ಉಚಿತ ಸ್ಯಾನಿಟರಿ ನ್ಯಾಪ್ಕಿನ್ ವಿತರಿಸಲಾಗಿದ್ದು, ‘ಮುಟ್ಟಿನ ಕಪ್’ ಯೋಜನೆಯಡಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 9.44 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಸೌಲಭ್ಯ ಕಲ್ಪಿಸಲು ಟೆಂಡರ್ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಇಲಾಖೆ ಆಯುಕ್ತ ಗುರುದತ್ತ ಹೆಗಡೆ, ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕ ಅವಿನಾಶ್ ಮೆನನ್ ರಾಜೇಂದ್ರನ್, ನಿರ್ದೇಶಕ ಡಾ. ವಸಂತ್ ಕುಮಾರ್ ಕೆ. ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.








