
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬೆಳಗ್ಗೆ 11.30 ಗಂಟೆಗೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮಹಿಳೆಯರ ಆರೋಗ್ಯದ ದೃಷ್ಟಿಯಿಂದ ರಾಜ್ಯಾದ್ಯಂತ ಸರ್ಕಾರಿ ಕಚೇರಿ, ಖಾಸಗಿ ಕಂಪೆನಿ, ಕೈಗಾರಿಕಾ ವಲಯದಲ್ಲಿ ಕಾರ್ಯನಿರ್ವಹಿಸುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ರಜೆ ನೀಡುವ ‘ಋುತು ಚಕ್ರ ರಜೆ ನೀತಿ-2025’ ಜಾರಿಗೆ ತರುವ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿನ ಉದ್ಯೋಗಿಯಾಗಿರುವ ಮಹಿಳೆಯರಿಗೆ ವೇತನ ಸಹಿತ ಋತು ಚಕ್ರ ರಜೆ ನೀಡುವ ಸಂಬಂಧ ಕ್ರೈಸ್ಟ್ ವಿಶ್ವವಿದ್ಯಾಲಯದ ಕಾನೂನು ವಿಭಾಗದ ಮುಖ್ಯಸ್ಥೆ ಸಪ್ನಾ ಎಸ್ ಅವರ ಅಧ್ಯಕ್ಷತೆಯ 18 ಸದಸ್ಯರ ಸಮಿತಿ ಶಿಫಾರಸು ಮಾಡಿತ್ತು. ಮುಟ್ಟಿನ ಅವಧಿಯಲ್ಲಿ ಮಹಿಳೆಯರಲ್ಲಿ ಆಗುವ ಶಾರೀರಿಕ ಬದಲಾವಣೆ, ಅನುಭವಿಸುವ ಸಂಕಷ್ಟ, ಸವಾಲು, ವಿಶ್ರಾಂತಿಯ ಅಗತ್ಯ, ಕೆಲಸದ ಸ್ಥಳದಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ವರದಿಯಲ್ಲಿ ಪ್ರಸ್ತಾಪಿಸಲಾಗಿದೆ.
ಈಗಾಗಲೇ ಈ ಮುಟ್ಟಿನ ರಜೆ ನೀತಿ ಬಿಹಾರ, ಕೇರಳ ಮತ್ತು ಒಡಿಶಾದಲ್ಲಿ ಜಾರಿಯಲ್ಲಿದ್ದು ಆ ರಾಜ್ಯಗಳು ಅನುಸರಿಸುತ್ತಿರುವ ನೀತಿ ಪರಿಗಣಿಸಿ ರಾಜ್ಯದಲ್ಲೂ ಪ್ರತ್ಯೇಕ ನೀತಿ ಜಾರಿಗೆ ತರಲು ನಿರ್ಧಾರ ಕೈಗೊಳ್ಳಲಿದೆ.






















































