
ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮುಂಗಾರು ಮಳೆಯ ಆರ್ಭಟದ ಜೋರಾದ ಹಿನ್ನೆಲೆಯಲ್ಲಿ ಆಗುಂಬೆ ಘಾಟಿಯಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆಯಿದ್ದು, ಹೀಗಾಗಿ ಆಗುಂಬೆ ಘಾಟಿಯಲ್ಲಿ ನಾಳೆಯಿಂದ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಜೂನ್ 28ರಿಂದ ಸೆಪ್ಟೆಂಬರ್ 15ರವರೆಗೆ ಭಾರಿ ವಾಹನ ಸಂಚಾರವನ್ನು ನಿಷೇಧಿಸಲಾಗಿದ್ದು ಬದಲಿ ಮಾರ್ಗ ಸೂಚಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ ಜಿಲ್ಲೆ ಸೇರಿದಂತೆ ಯಾವುದೇ ಪ್ರದೇಶಗಳ ಸರಕು ಸಾಗಣೆ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿರುವ ಹಿನ್ನೆಲೆಯಲ್ಲಿ ತೀರ್ಥಹಳ್ಳಿ- ಉಡುಪಿ ಮಾರ್ಗದಲ್ಲಿ ಸಂಚರಿಸುವ ಭಾರಿ ವಾಹನಗಳಿಗೆ ಬದಲಿ ಮಾರ್ಗವಾಗಿ ತೀರ್ಥಹಳ್ಳಿ–ಮಾಸ್ತಿಕಟ್ಟೆ– ಸಿದ್ದಾಪುರ– ಕುಂದಾಪುರ- ಉಡುಪಿ ಮಾರ್ಗವಾಗಿ ಭಾರಿ ವಾಹನಗಳು ಸಂಚರಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಮಲೆನಾಡು ಭಾಗದಲ್ಲಿ ಜೂನ್ 28ರಂದು ಸಹ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಹೀಗಾಗಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.



















































