
ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಶುಕ್ರವಾರ ತಡರಾತ್ರಿ ರಸ್ತೆ ಬದಿಯಲ್ಲಿ ನಿಂತಿದ್ದ ಸಿಲಿಂಡರ್ ತುಂಬಿದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ.
ತುಮಕೂರು ಮೂಲದ ಐವರು ಧರ್ಮಸ್ಥಳ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಕೊಟ್ಟಿಗೆಹಾರ ಪೆಟ್ರೋಲ್ ಬಂಕ್ ಸಮೀಪ ರಾತ್ರಿ ಸುಮಾರು 1.30ರ ವೇಳೆಗೆ ಅಪಘಾತ ಸಂಭವಿಸಿದೆ. ಕಾರು ಮೊದಲು ರಸ್ತೆ ಬದಿಯ ಕಟ್ಟೆಗೆ ಡಿಕ್ಕಿ ಹೊಡೆದು ಬಳಿಕ ನಿಂತಿದ್ದ ಲಾರಿಗೆ ಅಪ್ಪಳಿಸಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ಗುರುಕಿರಣ್ (28), ಮೋಹನ್ (30) ಹಾಗೂ ಜ್ಞಾನೇಶ್ (28) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಗಂಭೀರವಾಗಿ ಗಾಯಗೊಂಡ ಪ್ರೇಮ್ ಕುಮಾರ್ ಹಾಗೂ ಹೃತಿಕ್ ಅವರನ್ನು ಸ್ಥಳೀಯರು ಮತ್ತು ಪೊಲೀಸರು ಕಾರಿನಿಂದ ಹೊರತೆಗೆದು ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಇವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಅಪಘಾತದ ಶಬ್ದ ಕೇಳಿ ಸ್ಥಳೀಯರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ನಡೆಸಿದ್ದಾರೆ. ಬಣಕಲ್ ಆಂಬುಲೆನ್ಸ್ ಚಾಲಕ ಆರೀಫ್ ನೀಡಿದ ಮಾಹಿತಿ ಆಧರಿಸಿ ಬಣಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

























































