
ಬೆಂಗಳೂರು: ಕಾರ್ಮಿಕ ಸಚಿವ ಸಂತೋಷ್ ಲಾಡ್ ತಮ್ಮ ಎಕ್ಸ್ನ್ ಖಾತೆಯಲ್ಲಿ ಕರ್ನಾಟಕದಲ್ಲಿ ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ 50 ರಿಂದ ಶೇ 75ರ ವರೆಗೆ ಮೀಸಲಾತಿ ನೀಡುವುದಕ್ಕೆ ಸಂಬಂಧಿಸಿದ ವಿಧೇಯಕಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.
ಖಾಸಗಿ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ಕಲ್ಪಿಸುವ ವಿಧೇಯಕಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾದ ವಿಷಯವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ತುಂಬ ಖುಷಿಯಾಗುತ್ತಿದೆ. ಈ ವಿಧೇಯಕದಿಂದ ಶೇ 50 ರಷ್ಟು ಮ್ಯಾನೇಜ್ ಮೆಂಟ್ ಹುದ್ದೆಗಳು ಹಾಗೂ ಶೇ 75 ರಷ್ಟು ನಾನ್ ಮ್ಯಾನೇಜ್ ಮೆಂಟ್ ಹುದ್ದೆಗಳಲ್ಲಿ ಸ್ಥಳಿಯರಿಗೆ ಮೀಸಲಾತಿ ಸಿಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಕರ್ನಾಟಕದಲ್ಲಿ ಹುಟ್ಟಿದವರು, ಕರ್ನಾಟಕದಲ್ಲಿ 15 ವರ್ಷಗಳಿಂದ ವಾಸಿಸುತ್ತಿರುವವರು, ಕನ್ನಡ ಭಾಷೆಯಲ್ಲಿ ಮಾತಾಡಲು, ಓದಲು ಹಾಗೂ ಬರೆಯಲು ಬರುವವರು ಅಲ್ಲದೇ ನೋಡಲ್ ಏಜೆನ್ಸಿಗಳು ಟೋಲ್ ನಡೆಸುವ ಕನ್ನಡ ಭಾಷಾ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವವರು ಈ ಮೀಸಲಾತಿಗೆ ಅರ್ಹರಿರಲಿದ್ದಾರೆ.
ಈ ನಿಯಮವನ್ನು ಉಲ್ಲಂಘಿಸುವ ಸಂಸ್ಥೆಗಳಿಗೆ ದಂಡ ವಿಧಿಸುವ ಅಂಶವನ್ನು ಸಹ ವಿಧೇಯಕದಲ್ಲಿ ಸೇರಿಸಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ








