
ಬೆಂಗಳೂರು: ಮಕ್ಕಳಲ್ಲಿ ಮೊಬೈಲ್ ಗೀಳು ಕಡಿಮೆ ಮಾಡುವ ನಿಟ್ಟಿನಲ್ಲಿ, 16 ವರ್ಷದೊಳಗಿನವರಿಗೆ ಮೊಬೈಲ್ ಬಳಕೆ ನಿಷೇಧಿಸುವ ಬಗ್ಗೆ ಸರಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಶನಿವಾರ ಉನ್ನತ ಶಿಕ್ಷಣ ಪರಿಷತ್ ನಲ್ಲಿ ನಡೆದಿದ್ದ ಕುಲಪತಿಗಳ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸಿಎಂ ಸಿದ್ದರಾಮಯ್ಯ, ಮಕ್ಕಳಲ್ಲಿ ಮೊಬೈಲ್ ಬಳಕೆಯ ಸಾಧಕ ಬಾಧಕಗಳ ಬಗ್ಗೆ ಅಭಿಪ್ರಾಯ ಚಿಂತನೆ ನಡೆಸಿದ್ದಾರೆ.
ಸರಕಾರದ ಚಿಂತನೆಗೆ ಬಹುತೇಕ ಕುಲಪತಿಗಳು ಸಹಮತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಈಗಾಗಲೇ ಆಸ್ಟ್ರೇಲಿಯ, ಯುರೋಪ್ ನಂತಹ ಕೆಲವು ರಾಷ್ಟ್ರಗಳಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಬ್ಯಾನ್ ಮಾಡಲಾಗಿದೆ ನಮ್ಮ ರಾಜ್ಯದಲ್ಲೂ ಬಹಳಷ್ಟು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ವೀಕ್ಷಣೆಯಲ್ಲಿ ಕಾಲ ಕಳೆಯುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಮೌಲ್ಯ ದಾರಿತ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದು ಸಿಎಂ ಅಭಿಪ್ರಾಯಪಟ್ಟಿದ್ದಾರೆ.
ಇದಕ್ಕೆ ಪ್ರತಿಕ್ರಿಸಿದ ಬಹುತೇಕ ಕುಲಪತಿಗಳು, 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ನಿಷೇಧ ಒಳ್ಳೆಯ ನಿರ್ಧಾರ. ಪಿಯುಸಿ ಮತ್ತು ಪದವಿ ಕಾಲೇಜು ಮಕ್ಕಳಿಗೂ ಕನಿಷ್ಠ ತರಗತಿ ಒಳಗೆ ಮೊಬೈಲ್ ಬಳಕೆ ನಿಷೇಧಿಸುವ ಕೆಲಸ ಆಗಬೇಕು. ಈಗ ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ನಿಷೇಧ ಮಾಡಲಾಗಿದೆ ಅದನ್ನು ತರಗತಿಗೂ ವಿಸ್ತರಿಸಬೇಕು ಎಂದು ಸಲಹೆ ನೀಡಿದರು.



