
ಬಂಟ್ವಾಳ: ಬಿ.ಸಿ.ರೋಡು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಜು.16ರಂದು ನಡೆದ ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯ ಸ್ಥಿರಗೊಂಡ ಹಿನ್ನೆಲೆಯಲ್ಲಿ, 11 ದಿನಗಳ ಬಳಿಕ ಬಂಟ್ವಾಳ ನಗರ ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ.
ಕಕ್ಯಪದವು ನಿವಾಸಿ ಲಾವಣ್ಯ ಅವರನ್ನು ಬೆಳ್ತಂಗಡಿ ಓಡಿಲ್ನಾಳ ನಿವಾಸಿ ಚೇತನ್ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಹತ್ಯೆಗೈದ ಪ್ರಕರಣ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಘಟನೆಯ ಬಳಿಕ ಕಾರಿನಲ್ಲಿ ಪರಾರಿಯಾಗಿದ್ದ ಆರೋಪಿಯನ್ನು ಮರುದಿನ ಮಂಗಳೂರಿನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದರು. ಈ ವೇಳೆ ಆತ ವಿಷಕಾರಿ ಪದಾರ್ಥ (ಇಲಿಪಾಷಾಣ) ಸೇವಿಸಿದ್ದಾನೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ಮೊದಲು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಬಳಿಕ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.
ಆರಂಭದಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆದಿದ್ದ ಚೇತನ್‌ನ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಬಳಿಕ ಸಾಮಾನ್ಯ ವಾರ್ಡ್‌ಗೆ ಸ್ಥಳಾಂತರಿಸಲಾಗಿತ್ತು. ಇದೀಗ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ವಶಕ್ಕೆ ಪಡೆದಿದ್ದು, ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.
ಬಂಟ್ವಾಳ ಎಎಸ್‌ಪಿ (ಐಪಿಎಸ್) ಯಶ್ ಕುಮಾರ್ ಶರ್ಮ ಅವರ ಮಾರ್ಗದರ್ಶನದಲ್ಲಿ, ನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆನಂತಪದ್ಮನಾಭ ಅವರ ನೇತೃತ್ವದಲ್ಲಿ ಪ್ರಕರಣದ ತನಿಖೆ ಮುಂದುವರಿದಿದೆ.


















































