
ಶಿವಮೊಗ್ಗ: ಹೃದಯಾಘಾತದಿಂದ ಆರು ವರ್ಷದ ಬಾಲಕನೊಬ್ಬ ಮೃತಪಟ್ಟ ದುರ್ಘಟನೆ ಸಾಗರ ತಾಲೂಕಿನ ಹಾಳಸಸಿ ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕನನ್ನು ತ್ರಿಲೋಕ್ ಜೈನ್ (6) ಎಂದು ಗುರುತಿಸಲಾಗಿದೆ. ಇವರು ಕೊಡನವಳ್ಳಿ ಗ್ರಾಮದ ನಿವಾಸಿಗಳಾದ ಗೌತಮ್ ಜೈನ್ ಮತ್ತು ಶಿಲ್ಪಾ ದಂಪತಿಯ ಪುತ್ರನಾಗಿದ್ದು, ಹಾಳಸಸಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಥಮ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು.
ಶನಿವಾರ ಮಧ್ಯಾಹ್ನ ಶಾಲೆ ಮುಗಿಯುವ ವೇಳೆಯಲ್ಲಿ ತ್ರಿಲೋಕ್ ಶಾಲಾ ಆವರಣದಲ್ಲೇ ಏಕಾಏಕಿ ಅಸ್ವಸ್ಥಗೊಂಡು ನೆಲಕ್ಕುರುಳಿದ್ದಾನೆ ಎನ್ನಲಾಗಿದೆ. ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ದಾರಿಮಧ್ಯೆಯೇ ಬಾಲಕ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಚಿಕ್ಕ ವಯಸ್ಸಿನಲ್ಲೇ ಪುತ್ರನನ್ನು ಕಳೆದುಕೊಂಡ ಕುಟುಂಬಸ್ಥರ ದುಃಖ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

































