
ಬಾಗಲಕೋಟೆ: ರಾಜ್ಯದ ಬಡ ಮತ್ತು ಹಿಂದುಳಿದ ಸಮುದಾಯಗಳ ಆರ್ಥಿಕ–ಸಾಮಾಜಿಕ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಕೈಗೊಂಡಿರುವ ಕಾರ್ಯಗಳನ್ನು ಮುಂದಿಟ್ಟುಕೊಂಡು ಮತ ಕೇಳುತ್ತಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬಿಜೆಪಿ ಜನರಿಗೆ ತಪ್ಪು ಮಾಹಿತಿ ನೀಡಿ ಮತ ಕೇಳುತ್ತಿದೆ ಎಂದು ಆರೋಪಿಸಿದ ಅವರು, ರಾಜ್ಯದಲ್ಲಿ 9 ವರ್ಷ ಮತ್ತು ಕೇಂದ್ರದಲ್ಲಿ 12 ವರ್ಷ ಆಡಳಿತ ನಡೆಸಿರುವ ಬಿಜೆಪಿ ತನ್ನ ಸಾಧನೆಗಳನ್ನು ವಿವರಿಸಲಿ ಎಂದು ಸವಾಲು ಹಾಕಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಜಾರಿಗೆ ತಂದ ಸಾಮಾಜಿಕ ಯೋಜನೆಗಳಿಗೆ ಬಿಜೆಪಿ ಆರಂಭದಿಂದಲೇ ವಿರೋಧ ವ್ಯಕ್ತಪಡಿಸುತ್ತಿದ್ದು, ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂಬ ಆರೋಪಗಳನ್ನು ತಳ್ಳಿಹಾಕಿದರು. ಕಳೆದ ಮೂರು ವರ್ಷಗಳಲ್ಲಿ ಗ್ಯಾರಂಟಿ ಯೋಜನೆಗಳಿಗೆ 1.31 ಲಕ್ಷ ಕೋಟಿ ರೂಪಾಯಿ ಖರ್ಚು ಮಾಡಿದ್ದು, ನೀರಾವರಿ, ಗ್ರಾಮೀಣಾಭಿವೃದ್ಧಿ, ಕುಡಿಯುವ ನೀರು ಸೇರಿದಂತೆ ಹಲವು ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ ಎಂದರು.
ಸಾಲದ ವಿಷಯದಲ್ಲಿ ಬಿಜೆಪಿ ಮಾಡುತ್ತಿರುವ ಟೀಕೆಗೆ ಪ್ರತಿಕ್ರಿಯಿಸಿದ ಸಿಎಂ, ಆರ್ಥಿಕ ಹೊಣೆಗಾರಿಕೆ ಕಾಯ್ದೆಯ ನಿಯಮಗಳನ್ನು ಸರ್ಕಾರ ಮೀರಿಲ್ಲ. ರಾಜ್ಯದ ಸಾಲ ಜಿಡಿಪಿಯ ಮಿತಿಯೊಳಗೇ ಇದ್ದು, ಆರ್ಥಿಕ ಶಿಸ್ತನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರದೊಂದಿಗೆ ಹೋಲಿಕೆ ಮಾಡುತ್ತಾ, ಕರ್ನಾಟಕದ ಜಿಡಿಪಿ ಬೆಳವಣಿಗೆ ದರ ಹೆಚ್ಚು ಎಂಬುದನ್ನು ಉಲ್ಲೇಖಿಸಿದ ಅವರು, ಬಿಜೆಪಿ ಟೀಕೆ ಮಾಡುವ ಬದಲು ತನ್ನ ಆಡಳಿತದ ಸಾಧನೆಗಳನ್ನು ಜನರ ಮುಂದೆ ಇಡಬೇಕು. ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಅನ್ನಭಾಗ್ಯ ಸೇರಿದಂತೆ ಹಲವಾರು ಯೋಜನೆಗಳನ್ನು ಬಿಜೆಪಿ ಕಡಿತಗೊಳಿಸಿದೆ ಎಂದು ಆರೋಪಿಸಿದರು.









