
ನವದೆಹಲಿ: ಸಚಿವ ಸಂತೋಷ್ ಲಾಡ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಪ್ರವಾಹ ಪೀಡಿತ ವಯನಾಡಿಗೆ ಭೇಟಿ ನೀಡಿ ಪರಿಹಾರ ಕಾರ್ಯಗಳು, ಸಂತ್ರಸ್ತರ ರಕ್ಷಣೆ ಸೇರಿದಂತೆ ಹಲವು ವಿಚಾರಗಳಲ್ಲಿ ನೆರವು ನೀಡಲಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಕರೆ ಮಾಡಿ ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳು, ಸಂತ್ರಸ್ಥರ ರಕ್ಷಣೆ ಸೇರಿದಂತೆ ಅಗತ್ಯ ಎಲ್ಲಾ ರೀತಿಯ ನೆರವುಗಳಿಗೆ ಕೇರಳ ಸರ್ಕಾರದ ಜೊತೆ ಕೈ ಜೋಡಿಸಿ ಜನರ ಜೀವ, ಆರೋಗ್ಯ ರಕ್ಷಣೆಗೆ ನೆರವಾಗುವಂತೆ ಸೂಚನೆ ನೀಡಿದ್ದಾರೆ. ಇದರ ಬೆನ್ನಲ್ಲೇ ವಯನಾಡಿಗೆ ಹೊರಟ ಸಚಿವ ಸಂತೋಷ್ ಲಾಡ್ ಸದ್ಯ ಕೇರಳ ರಾಜ್ಯದ ಮುಖ್ಯಮಂತ್ರಿ ಕಚೇರಿ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ. ದುರಂತದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ತುರ್ತು ಮತ್ತು ಕ್ಷಿಪ್ರ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಲಾಡ್ ಮಾಹಿತಿ ನೀಡಿದ್ದಾರೆ.













