
ಮೈಸೂರು: ಸೆಪ್ಟೆಂಬರ್ 1 ರಂದು ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರು ಅರಮನೆಗೆ ಭೇಟಿ ನೀಡಲಿದ್ದು ಈ ಹಿನ್ನೆಲೆಯಲ್ಲಿ ಸೆ.1 ರಿಂದ ಸೆ.2ರ ಮಧ್ಯಾಹ್ನದವರೆಗೆ ಮೈಸೂರು ಅರಮನೆಗೆ ಪ್ರವಾಸಿಗರ ಪ್ರವೇಶಕ್ಕೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ.
ಮೈಸೂರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು ರಾಷ್ಟ್ರಪತಿಗಳಿಗೆ ಪತ್ರ ಬರೆದು ಮೈಸೂರು ಅರಮನೆಗೆ ಭೇಟಿ ನೀಡುವಂತೆ ಕೋರಿದ್ದು ಅವರ ಆಹ್ವಾನವನ್ನು ಸ್ವೀಕರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್ 1 ರಂದು ಅರಮನೆಗೆ ಭೇಟಿ ನೀಡಲಿದ್ದಾರೆ.
ರಾಷ್ಟ್ರಪತಿಯವರ ಭೇಟಿಯ ಕಾರಣದಿಂದ ಮೈಸೂರು ನಗರದಲ್ಲಿ ಬಿಗಿ ಭದ್ರತಾ ವ್ಯವಸ್ಥೆಗಳನ್ನು ಕೈಗೊಂಡಿದ್ದು ಅರಮನೆಯ ಸುತ್ತಮುತ್ತ ಮತ್ತು ರಾಷ್ಟ್ರಪತಿಗಳು ಪ್ರಯಾಣಿಸುವ ಮಾರ್ಗಗಳಲ್ಲಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಭೇಟಿಯು ಮೈಸೂರು ನಗರದ ಘನತೆಯನ್ನು ಹೆಚ್ಚಿಸುವುದರ ಜೊತೆಗೆ, ಅರಮನೆಯ ಇತಿಹಾಸ ಮತ್ತು ಸಂಸ್ಕೃತಿಗೆ ಮತ್ತಷ್ಟು ಮೆರುಗು ನೀಡಲಿದೆ. ಪ್ರವಾಸಿಗರು ಮತ್ತು ಸ್ಥಳೀಯರು ಈ ನಿರ್ಬಂಧಗಳನ್ನು ಗಮನದಲ್ಲಿಟ್ಟುಕೊಂಡು ಸಹಕರಿಸುವಂತೆ ಅರಮನೆ ಮಂಡಳಿ ಸಾರ್ವಜನಿಕರಲ್ಲಿ ಮನವಿ ಮಾಡಿದೆ.