
ನವದೆಹಲಿ: ಲಡಾಖ್‌ಗೆ 6ನೇ ವೇಳಾಪಟ್ಟಿಯಡಿ ವಿಶೇಷ ಸಾಂವಿಧಾನಿಕ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಕಳೆದ 20 ದಿನಗಳಿಂದ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ (59) ಅವರನ್ನು ದೆಹಲಿ ಪೊಲೀಸರು ಶನಿವಾರ ಸಫ್ದರ್‌ಜಂಗ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಬೆಳವಣಿಗೆಯ ನಂತರ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಆಸ್ಪತ್ರೆ ಆಡಳಿತದ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಗೀತಾಂಜಲಿ, ತಮ್ಮ ಪತಿಯ ಚಿಕಿತ್ಸೆಗೆ ಸಂಬಂಧಿಸಿದಂತೆ ಕುಟುಂಬ ಹಾಗೂ ಹಲವು ದಿನಗಳಿಂದ ಆರೋಗ್ಯ ನೋಡಿಕೊಳ್ಳುತ್ತಿರುವ ವೈದ್ಯರ ಅನುಮತಿ ಇಲ್ಲದೆ ಯಾವುದೇ ಔಷಧಿ, ಮಾತ್ರೆ ಅಥವಾ ಡ್ರಿಪ್ ನೀಡಬಾರದು ಎಂದು ಆಸ್ಪತ್ರೆ ಆಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ. ನಿನ್ನೆ ರಾತ್ರಿ ತನಕ ಪತಿ ಆರೋಗ್ಯವಾಗಿದ್ದರು. ಅವರನ್ನು ಬಲವಂತವಾಗಿ ಆಸ್ಪತ್ರೆಗೆ ದಾಖಲಿಸುವ ಅಗತ್ಯವೇ ಇರಲಿಲ್ಲ ಎಂದು ಅವರು ಆರೋಪಿಸಿದ್ದಾರೆ.
ಜೂನ್ 28ರಿಂದ ಅನ್ನಾಹಾರ ತ್ಯಜಿಸಿ ಉಪವಾಸ ನಡೆಸುತ್ತಿರುವ ವಾಂಗ್ಚುಕ್, ಲಡಾಖ್‌ನ ಪರಿಸರ ಸಂರಕ್ಷಣೆ ಮತ್ತು ಸ್ಥಳೀಯರಿಗೆ 6ನೇ ವೇಳಾಪಟ್ಟಿಯಡಿ ಸಂವಿಧಾನಾತ್ಮಕ ರಕ್ಷಣೆ ನೀಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ಅಲ್ಲದೆ ನೀಟ್ ಪರೀಕ್ಷೆ ಅಕ್ರಮದ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದು ಜೊತೆಗೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಬೇಕೆಂಬುದು ವಾಂಗ್ಚುಕ್ ಅವರ ಪ್ರಮುಖ ಬೇಡಿಕೆಗಳಲ್ಲಿ ಒಂದಾಗಿದೆ. ಆಸ್ಪತ್ರೆಗೆ ದಾಖಲಿಸುವ ಮುನ್ನ ಮಾತನಾಡಿದ್ದ ಅವರು, ನಿರಂತರ ಉಪವಾಸದಿಂದ ತಮ್ಮ ದೇಹದ ತೂಕ ಶೇ.20ರಷ್ಟು ಇಳಿದಿದ್ದರೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.
ಈ ಕುರಿತು ಸ್ಪಷ್ಟನೆ ನೀಡಿರುವ ದೆಹಲಿ ಪೊಲೀಸರು, ಹೈಕೋರ್ಟ್ ನಿರ್ದೇಶನ ಹಾಗೂ ಹಿರಿಯ ವೈದ್ಯರ ಸಲಹೆಯಂತೆ ವಾಂಗ್ಚುಕ್ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ. ಅವರನ್ನು ಕರೆದೊಯ್ಯುವ ವೇಳೆ ಕೆಲ ಪ್ರತಿಭಟನಾಕಾರರು ಅಡ್ಡಿಪಡಿಸಲು ಯತ್ನಿಸಿದರೂ ಪರಿಸ್ಥಿತಿಯನ್ನು ನಿಯಂತ್ರಿಸಲಾಗಿದೆ ಎಂದಿದ್ದಾರೆ.

















































