
ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ರಾಜಭವನಕ್ಕೆ ತೆರಳಿ ರಾಜಭವನದ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದರು.
ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಸಚಿವರು ಉಪಸ್ಥಿತರಿದ್ದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಸಂಜೆ 7.30ರ ಬಳಿಕ ರಾಜೀನಾಮೆಯನ್ನು ಅಧಿಕೃತವಾಗಿ ಅಂಗೀಕರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ರಾಜ್ಯ ಕಾಂಗ್ರೆಸ್‌ನಲ್ಲಿ ಕಳೆದ ಹಲವು ತಿಂಗಳುಗಳಿಂದ ನಾಯಕತ್ವ ಬದಲಾವಣೆ ಕುರಿತ ಚರ್ಚೆ ನಡೆಯುತ್ತಿದ್ದು, ಮಂಗಳವಾರ ದೆಹಲಿಯಲ್ಲಿ ಹೈಕಮಾಂಡ್ ಸಭೆಯಲ್ಲಿ ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗಿದೆ ಎನ್ನಲಾಗಿದೆ.
ಈ ಹಿನ್ನೆಲೆ ಗುರುವಾರ ಬೆಳಗ್ಗೆ ಕಾವೇರಿ ನಿವಾಸದಲ್ಲಿ ಸಚಿವರೊಂದಿಗೆ ಸಭೆ ನಡೆಸಿದ ಸಿದ್ದರಾಮಯ್ಯ, ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ. ಜೊತೆಗೆ ಡಿ.ಕೆ. ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಆಗಲಿದ್ದು, ಎಲ್ಲರೂ ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ.











































