ಬೇಡಿಕೆ ಈಡೇರದಿದ್ದರೆ ‘ಸಲ್ಲೇಖನ ವ್ರತ’ದ ಮೂಲಕ ದೇಹ ತ್ಯಾಗ ಮಾಡುವ ಎಚ್ಚರಿಕೆ ನೀಡಿದ ಗುಣಧರನಂದಿ ಜೈನಮುನಿ ಮಹಾರಾಜ್

ಹುಬ್ಬಳ್ಳಿ: ಜೈನ ಸಮುದಾಯಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೈನ ಸಮುದಾಯ ಸರ್ಕಾರದ ವಿರುದ್ಧ ಹೋರಾಟಕ್ಕೆ ಸಜ್ಜಾಗಿದೆ. ಮುಂದಿನ 10 ದಿನಗಳಲ್ಲಿ ಅಭಿವೃದ್ಧಿ ನಿಗಮ ಘೋಷಿಸದಿದ್ದರೆ ಬೆಳಗಾವಿಯ ಸುವರ್ಣಸೌಧದ ಎದುರು ಅನ್ನ, ನೀರು ತ್ಯಜಿಸಿ ‘ಸಲ್ಲೇಖನ ವ್ರತ’ದ ಮೂಲಕ ದೇಹತ್ಯಾಗ ಮಾಡುವುದಾಗಿ ವರೂರಿನ ನವಗ್ರಹ ತೀರ್ಥದ ಜೈನಮುನಿ ಶ್ರೀ ಗುಣಧರನಂದಿ ಮಹಾರಾಜ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿರುವ ಅವರು, ಸುದ್ದಿಗೋಷ್ಠಿಯಲ್ಲಿ ಹೋರಾಟದ ರೂಪುರೇಷೆಗಳನ್ನು ಪ್ರಕಟಿಸಿದ್ದಾರೆ.
ರಾಜ್ಯದಲ್ಲಿ ಹಲವು ಸಮುದಾಯಗಳಿಗೆ ಪ್ರತ್ಯೇಕ ಅಭಿವೃದ್ಧಿ ನಿಗಮಗಳನ್ನು ಸ್ಥಾಪಿಸಲಾಗಿದ್ದರೂ, ಸುಮಾರು 20 ಲಕ್ಷ ಮತದಾರರನ್ನು ಹೊಂದಿರುವ ಜೈನ ಸಮುದಾಯವನ್ನು ಕಡೆಗಣಿಸಲಾಗಿದೆ ಎಂದು ಗುಣಧರನಂದಿ ಶ್ರೀಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೈನ ಬಸದಿಗಳು ಮತ್ತು ಮುನಿಗಳ ಮೇಲಿನ ದೌರ್ಜನ್ಯ ತಡೆಯಲು ಕಠಿಣ ಕ್ರಮ ಕೈಗೊಳ್ಳಬೇಕು. ಪಾದಯಾತ್ರೆ ವೇಳೆ ರಾತ್ರಿ ತಂಗಲು ಸರ್ಕಾರಿ ಶಾಲೆಗಳಲ್ಲಿ ಅವಕಾಶ ಕಲ್ಪಿಸಬೇಕು ಎಂದೂ ಒತ್ತಾಯಿಸಿದ್ದಾರೆ.
ಹೋರಾಟದ ಮೊದಲ ಹಂತವಾಗಿ ಜೈನ ಮತದಾರರು ಹೆಚ್ಚಿರುವ ಕ್ಷೇತ್ರಗಳ ಶಾಸಕರನ್ನು ಭೇಟಿಯಾಗಿ ಬೆಂಬಲ ಕೋರಲಾಗುವುದು. ಬಳಿಕ ಚಿಕ್ಕೋಡಿಯಿಂದ ಬೆಳಗಾವಿಯ ಸುವರ್ಣಸೌಧದವರೆಗೆ ಲಕ್ಷಾಂತರ ಜೈನ ಸಮುದಾಯದವರೊಂದಿಗೆ ಬೃಹತ್ ಪಾದಯಾತ್ರೆ ನಡೆಸಲು ನಿರ್ಧರಿಸಲಾಗಿದೆ. ಬೇಡಿಕೆ ಈಡೇರದಿದ್ದರೆ ಸುವರ್ಣಸೌಧದ ಎದುರು ಸಲ್ಲೇಖನ ವ್ರತ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದು, ಸರ್ಕಾರದ ಮುಂದಿನ ನಡೆ ಕುತೂಹಲ ಮೂಡಿಸಿದೆ.






















