
ಬೆಂಗಳೂರು: ತುರ್ತು ವೈದ್ಯಕೀಯ ಸೇವೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು ರಾಜ್ಯ ಆರೋಗ್ಯ ಇಲಾಖೆ 108 ಆ್ಯಂಬುಲೆನ್ಸ್ ಸೇವೆಗೆ ಹೊಸ ನಿಯಮ ಜಾರಿಗೆ ತರಲು ಮುಂದಾಗಿದೆ. ಕರೆ ಬಂದ ಬಳಿಕ 15 ನಿಮಿಷಗಳೊಳಗೆ ಆ್ಯಂಬುಲೆನ್ಸ್ ಸ್ಥಳಕ್ಕೆ ತಲುಪದಿದ್ದರೆ ಸಂಬಂಧಪಟ್ಟ ಚಾಲಕ ಅಥವಾ ಸೇವಾ ಸಂಸ್ಥೆಗೆ ₹5,000 ದಂಡ ವಿಧಿಸಲು ನಿರ್ಧರಿಸಲಾಗಿದೆ.
ಆರೋಗ್ಯ ಸಚಿವ ಯು.ಟಿ. ಖಾದರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಈ ನಿಯಮ ಜಾರಿಯಾಗಲಿದೆ. ನಗರ ಪ್ರದೇಶಗಳಲ್ಲಿ ಟ್ರಾಫಿಕ್ ನೆಪವೊಡ್ಡಿ ವಿಳಂಬ ಮಾಡುವುದಕ್ಕೂ ಅವಕಾಶ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಪದೇ ಪದೇ ಕೈಕೊಡುವ ಹಾಗೂ ರಸ್ತೆಯಲ್ಲಿ ನಿಧಾನವಾಗಿ ಸಾಗುವ ಹಳೆಯ ಎಲ್ಲಾ 108 ಆ್ಯಂಬುಲೆನ್ಸ್ ವಾಹನಗಳನ್ನು ತಕ್ಷಣವೇ ಗುಜರಿಗೆ ಹಾಕುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದ್ದು ಹಳೆಯ ವಾಹನಗಳ ಜಾಗಕ್ಕೆ ಅತ್ಯಾಧುನಿಕ ಸೌಲಭ್ಯಗಳುಳ್ಳ ಹೊಸ ಆ್ಯಂಬುಲೆನ್ಸ್‌ಗಳನ್ನು ಖರೀದಿಸಲು ರಾಜ್ಯ ಸರ್ಕಾರ ಪ್ರಕ್ರಿಯೆ ಆರಂಭಿಸಿದೆ. ತುರ್ತು ಸೇವೆಯಲ್ಲಿ ಸಮಯ ಪಾಲನೆ ಕಡ್ಡಾಯವಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಸಿದ್ದಾರೆ.














































