ನವದೆಹಲಿ: ಕರ್ನಾಟಕ ರಾಜ್ಯ ಸರ್ಕಾರವು ಬರದಿಂದ ಆಗಿರುವ ನಷ್ಟ ಪರಿಹಾರ ನೀಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ್ದು ಇದರ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್, ಸಮಸ್ಯೆಯನ್ನು ನೀವೇ ಮಾತುಕತೆ ನಡೆಸಿ ಪರಿಹರಿಸಿಕೊಳ್ಳಿ ಎಂದು ಸೂಚನೆ ನೀಡಿದೆ.
ಕರ್ನಾಟಕವು 2023ರಲ್ಲಿ ಬರದಿಂದ ತತ್ತರಿಸಿದ್ದ ರಾಜ್ಯಕ್ಕೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್‌ಡಿಆರ್‌ಎಫ್)ಯಿಂದ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು ಮಂಗಳವಾರ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಬಿ.ಅರ್. ಗವಾಯಿ, ಕೆ.ವಿ.ವಿಶ್ವನಾಥನ್ ಪೀಠದ ಮುಂದೆ ಈ ಅರ್ಜಿ ವಿಚಾರಣೆ ನಡೆಯಿತು.
ಈ ವೇಳೆ ಕೇಂದ್ರ ಸರ್ಕಾರದ ಪರ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಹಾಜರಾಗಿ, ಈ ಬಗ್ಗೆ ಪ್ರಮಾಣಪತ್ರ ಸಲ್ಲಿಸಲು ಮತ್ತಷ್ಟು ಸಮಯಾವಕಾಶ ಬೇಕೆಂದು ಮನವಿ ಮಾಡಿದಾಗ ಈ ವೇಳೆ ನ್ಯಾಯಪೀಠವು, ‘ನೀವೇ ಮಾತುಕತೆ ಮೂಲಕ ಸಮಸ್ಯೆ ಪರಿಹರಿಸಿಕೊಳ್ಳುವುದು ಉತ್ತಮ’ ಎಂದು ಸಲಹೆ ನೀಡಿತು. ಅಲ್ಲದೆ ‘ಎಷ್ಟು ಹಣ ಬಿಡುಗಡೆ ಮಾಡಲಾಗಿದೆ’ ಎಂದು ನ್ಯಾಯಪೀಠ ಪ್ರಶ್ನಿಸಿದಾಗ ಇದಕ್ಕೆ ಉತ್ತರಿಸಿದ ಕರ್ನಾಟಕ ಪರ ವಕೀಲರು, ‘ ₹18,171 ಕೋಟಿ ಕೇಳಲಾಗಿತ್ತು. ಕೇಂದ್ರ ₹3,819 ಕೋಟಿ ನೀಡಿದೆ’ ಎಂದು ಹೇಳಿದೆ. ಬಳಿಕ ನ್ಯಾಯಪೀಠ ವಿಚಾರಣೆಯನ್ನು ಜನವರಿ ತಿಂಗಳಿಗೆ ಮುಂದೂಡಿತು