
ಬೆಂಗಳೂರು: ಕೆ.ಆರ್ ನಗರದಲ್ಲಿ ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ದೋಷಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿದೆ.
ಐಪಿಸಿ ಸೆಕ್ಷನ್ 376 (2) (K), 376 (2) (N) ಅಡಿಯಲ್ಲಿ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿದ್ದು ಅಲ್ಲದೇ 5 ಲಕ್ಷ ರೂ. ದಂಡವನ್ನೂ ನ್ಯಾಯಾಲಯ ವಿಧಿಸಿದೆ. ಸಂತ್ರಸ್ತೆಗೂ 7 ಲಕ್ಷ ರೂ. ಪರಿಹಾರವನ್ನು ಘೋಷಿಸಿದೆ. ಪ್ರಜ್ವಲ್ ರೇವಣ್ಣಗೆ ಗರಿಷ್ಠ ಶಿಕ್ಷೆಯನ್ನು ಪ್ರಕಟಿಸಲಾಗಿದ್ದು ಇಂದಿನಿಂದಲೇ ರೇಪಿಸ್ಟ್ ಪ್ರಜ್ವಲ್‌ಗೆ ಜೀವನಪರ್ಯಂತ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಪ್ರಕರಣದ ಹಿನ್ನೆಲೆ:
ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಅತ್ಯಾಚಾರ, ಅಪಹರಣ ಕೇಸ್ ದಾಖಲಾಗಿತ್ತು. ಮನೆಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ನಂತರ ವಿಷಯ ಹೊರಗೆ ಬರುತ್ತೆ ಎಂದು ತಿಳಿದು ಸಂತ್ರಸ್ತೆಯನ್ನ ರೇವಣ್ಣ, ಭವಾನಿ, ಸತೀಶ್ ಬಾಬು ಸೇರಿದಂತೆ 9 ಜನ ಸೇರಿ ಅಪಹರಿಸಿದ್ದರು. ಬಳಿಕ ಆಕೆಯನ್ನು ಹುಣಸೂರು ಬಳಿಯ ತೋಟದ ಮನೆಯೊಂದರಲ್ಲಿ ಕೂಡಿ ಹಾಕಲಾಗಿತ್ತು. ಇದೇ ಅಪಹರಣ ಪ್ರಕರಣದಿಂದಲೇ ರೇವಣ್ಣ ಸೇರಿದಂತೆ 8 ಜನ ಜೈಲಿಗೆ ಹೋಗಿದ್ದರು. ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದ ಭವಾನಿ ರೇವಣ್ಣ ಬಳಿಕ ನಿರೀಕ್ಷಣಾ ಜಾಮೀನು ಪಡೆದಿದ್ದರು.
ಅನಂತರ ಸಂತ್ರಸ್ತೆಯನ್ನು ರಕ್ಷಿಸಿದ ಎಸ್‌ಐಟಿ, ಆಕೆಯ ಹೇಳಿಕೆ ದಾಖಲು ಮಾಡಿ ಪ್ರಕರಣ ದಾಖಲಿಸಿತ್ತು. ಹೇಳಿಕೆಯ ಮೇಲೆ ತನಿಖೆ ಮಾಡಿ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಬಳಿಕ ಪ್ರಜ್ವಲ್ ರೇವಣ್ಣ ಮೊಬೈಲ್‌ನಲ್ಲಿ ಸಂತ್ರಸ್ತೆಯನ್ನು ಬೆತ್ತಲುಗೊಳಿಸಿ ಬಲವಂತವಾಗಿ ಲೈಂಗಿಕ ಕಿರುಕುಳ ನೀಡಿದ್ದ ವೀಡಿಯೋವೊಂದು ಪತ್ತೆಯಾಗಿತ್ತು. ಇದು ಪ್ರಕರಣದ ಬಹುದೊಡ್ಡ ಸಾಕ್ಷ್ಯವಾಗಿ ಪರಿಣಮಿಸಿತು. ಕೊನೆಗೆ ಎಫ್‌ಎಸ್‌ಎಲ್ ಮೂಲಕ ವಿಡಿಯೋ ತುಣುಕಿನಲ್ಲಿರುವುದು ಪ್ರಜ್ವಲ್ ರೇವಣ್ಣ ಎನ್ನುವುದು ಸಾಬೀತಾಗಿತ್ತು.
ಕಳೆದ ಲೋಕಸಭಾ ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳಿದ್ದ ಪೆನ್ ಡ್ರೈವ್‌ಗಳನ್ನ ಹಾಸನ ಕ್ಷೇತ್ರದಾದ್ಯಂತ ಹಂಚಲಾಗಿತ್ತು. ಬಳಿಕ ಹೊಳೆನರಸೀಪುರದ ಮಹಿಳೆಯೊಬ್ಬರು ನೀಡಿದ್ದ ದೂರಿನ ಆಧಾರದ ಮೇಲೆ ತನಿಖೆ ಆರಂಭವಾಗಿತ್ತು. ಪ್ರಕರಣ ಸಂಬಂಧ 2024ರ ಮೇ 31ರಂದು ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಲಾಗಿತ್ತು.