
ಬೆಂಗಳೂರು: ಹವಾಮಾನ ಇಲಾಖೆಯು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ ಒಂದು ವಾರ ಮಳೆ ಮುಂದುವರೆಯಲಿದೆ ಎಂದು ಮಾಹಿತಿ ನೀಡಿದೆ.
ಈ ಕುರಿತು ಮಾತನಾಡಿದ ಹವಾಮಾನ ತಜ್ಞ ಶ್ರೀನಿವಾಸ್ ರೆಡ್ಡಿ ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಪರಿಣಾಮ ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ವಾಯುಭಾರ ಕುಸಿತ ಗುರುವಾರ ತೀವ್ರತೆ ಪಡೆದುಕೊಳ್ಳಲಿದ್ದು ಆದರೆ, ಚಂಡಮಾರುತವಾಗುವ ಸಾಧ್ಯತೆ ಇಲ್ಲ ಎಂದು ತಿಳಿಸಿದ್ದಾರೆ.
ಈ ಬಾರಿ ಅರಬ್ಬಿ ಸಮುದ್ರಕ್ಕಿಂತ, ಬಂಗಾಳಕೊಲ್ಲಿ ಮೂಲಕ ಹೆಚ್ಚಿನ ಮಳೆ ಮಾರುತಗಳು ಬರುತ್ತಿರುವ ಹಿನ್ನೆಲೆಯಲ್ಲಿ ಚಳಿಗಾಳಿಯೊಂದಿಗೆ ಮಳೆಯಾಗುತ್ತಿದೆ. ಧಾರಾಕಾರ ಮಳೆ ಬದಲು ಜಿಟಿ ಜಿಟಿ ಮಳೆ ಮುಂದುವರೆಯಲಿದೆ. ಮಳೆ ಕಡಿಮೆಯಾದರೂ ಮೋಡ ಕವಿದ ವಾತಾವರಣ ಒಳನಾಡು ಜಿಲ್ಲೆಗಳಲ್ಲಿ ಇರಲಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆ ಇರುವುದಿಲ್ಲ ಎಂದು ತಿಳಿಸಿದ್ದಾರೆ.
ಕುಷ್ಟಗಿಯಲ್ಲಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಬುಧವಾರ ರಾತ್ರಿ ಹಾಗೂ ಗುರುವಾರ ಬೆಳಗಿನ ಜಾವ ಸುರಿದ ಭಾರಿ ಮಳೆಗೆ ಕೆಲವು ಮನೆಗಳು ಕುಸಿದಿದ್ದರೆ, ಹತ್ತಿ, ದಾಳಿಂಬೆ ಬೆಳೆ ನೀರುಪಾಲಾಗಿ ಅಪಾರ ಹಾನಿಯಾಗಿದೆ.