
ಬೆಂಗಳೂರು: Golden Book of World Records ನಲ್ಲಿ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಶಕ್ತಿ ಯೋಜನೆಯು ಅತಿ ಹೆಚ್ಚು ಮಹಿಳಾ ಪ್ರಯಾಣಿಕರು ಪ್ರಯಾಣಿಸಿರುವ (2023ರ ಜೂನ್ 11 ರಿಂದ 2025 ರ ಜುಲೈ 25 ಅವಧಿ) 500 ಕೋಟಿ ಮಹಿಳಾ ಪ್ರಯಾಣಿಕರ ಟಿಕೆಟ್ ಪ್ರಯಾಣವು ವಿಶ್ವ ದಾಖಲೆಯಲ್ಲಿ ಸೇರ್ಪಡೆಗೊಂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶಕ್ತಿ ಯೋಜನೆಯು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ಔದ್ಯೋಗಿಕವಾಗಿ ಮಹಿಳೆಯರನ್ನು ಸಬಲರನ್ನಾಗಿಸುತ್ತದೆ ಎಂದು ಬಲವಾಗಿ ನಂಬಿದ್ದವರು . ಈ ಚಾರಿತ್ರಿಕ ಸಾಧನೆಯನ್ನು ಕೆಎಸ್‌ಆರ್‌ಟಿಸಿ, ಬಿಎಂಟಿಸಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಆಡಳಿತ ಮಂಡಳಿ ಸಾರಿಗೆ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸಾರಿಗೆ ಇಲಾಖೆಯ ಕಾರ್ಯದರ್ಶಿ, ವ್ಯವಸ್ಥಾಪಕ ನಿರ್ದೇಶಕರು, ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸಮರ್ಪಿಸಲಾಗಿದೆ.
ಈ ಕುರಿತು ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ ‘ನಾನು ಸಾರಿಗೆ ಸಚಿವನಾಗಿ ಎರಡನೇ ಬಾರಿಗೆ ಅಧಿಕಾರ ವಹಿಸಿಕೊಂಡ ಕೂಡಲೇ ದೇಶದಲ್ಲೇ ಪ್ರಪ್ರಥಮ ಬಾರಿಗೆ ಜಾರಿಗೆ ತಂದ ಗ್ಯಾರಂಟಿ ಯೋಜನೆಯಾದ ಶಕ್ತಿ ಯೋಜನೆಯು ಅತ್ಯಂತ ಸವಾಲಿನಿಂದ ಕೂಡಿತ್ತು. ಕಳೆದ ಐದಾರು ವರ್ಷದಲ್ಲಿ ಸಾರಿಗೆ ಸಂಸ್ಥೆಗಳಲ್ಲಿ ಹೊಸ ಬಸ್ಸುಗಳ ಸೇರ್ಪಡೆಯಾಗಿಲ್ಲ. ಹೊಸ ನೇಮಕಾತಿ ಆಗಿಲ್ಲ, ಸಾರಿಗೆ ಸಂಸ್ಥೆಗಳು ಸಾಲದ ಸುಳಿಯಲ್ಲಿದ್ದವು. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಒಂದು ತಂಡವಾಗಿ ಕರ್ತವ್ಯ ನಿರ್ವಹಿಸಿ ಶಕ್ತಿ ಯೋಜನೆಯನ್ನು ಯಶಸ್ವಿಯಾಗಿ ಮುನ್ನಡೆಸಿರುವುದು ನನಗೆ ವೈಯಕ್ತಿಕವಾಗಿ ಸಂತೃಪ್ತಿ ತಂದಿದೆ.
ಈ ಎರಡು ವರ್ಷಗಳ ಶಕ್ತಿ ಯೋಜನೆಯ ಹಾದಿಯಲ್ಲಿ ಸಾರಿಗೆ ಸಂಸ್ಥೆಗಳಲ್ಲಿ 5,800 ಹೊಸ ಬಸ್‌ಗಳ ಸೇರ್ಪಡೆ, 10,000 ಹೊಸ ನೇಮಕಾತಿ, ಸಾಲ ಪಾವತಿಸಲು ಸರ್ಕಾರದಿಂದ 2,000 ಕೋಟಿ ಸಹಾಯ, ಸಾರಿಗೆ ಸಂಸ್ಥೆಗಳ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳ ಸೇರಿದಂತೆ ಇತರೆ ಅಮೂಲಾಗ್ರ ಬದಲಾವಣೆಗೆ ಕಾರಣವಾಗಿದೆ. ಸಾರಿಗೆ ಸಂಸ್ಥೆಗಳಲ್ಲಿ ಹತ್ತು ಹಲವು ಸವಾಲುಗಳಿದ್ದು, ಎಲ್ಲವನ್ನು ನಾನು ಇತ್ಯರ್ಥ ಪಡಿಸಲು ಸಾಧ್ಯವಿಲ್ಲ. ಆದರೆ ಪ್ರಾಮಾಣಿಕವಾಗಿ ಪ್ರಯತ್ನ ಮಾಡಿದ್ದೇನೆ ಮತ್ತು ಮಾಡುತ್ತಿದ್ದೇನೆ’ ಎಂದು ತಿಳಿಸಿದ್ದಾರೆ.