
ಬೆಂಗಳೂರು: ಮುಜರಾಯಿ ಇಲಾಖೆ ಸಚಿವ ಆರ್.ರಾಮಲಿಂಗಾ ರೆಡ್ಡಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಧರ್ಮಸ್ಥಳದ ಮಂಜುನಾಥಸ್ವಾಮಿ ದೇವಸ್ಥಾನವನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ತರಲು ರಾಜ್ಯ ಸರ್ಕಾರದ ಮೇಲೆ ಯಾವುದೇ ಒತ್ತಡ ಇಲ್ಲ ಎಂದು ಹೇಳಿದ್ದಾರೆ.
ಹಿಂದಿನ ಕಾಲದಲ್ಲಿ ವಂಶಪಾರಂಪರ್ಯವಾಗಿ ದೇವಸ್ಥಾನಗಳನ್ನು ನಡೆಸಿಕೊಂಡು ಬರಲಾಗುತ್ತಿತ್ತು. ಬದಲಾದ ಕಾಲಘಟ್ಟದಲ್ಲಿ ಕುಟುಂಬಗಳಲ್ಲಿ ಜನ ಹೆಚ್ಚಾಗಿ ದೇವಸ್ಥಾನ ನಡೆಸುವ ವಿಚಾರದಲ್ಲಿ ವ್ಯಾಜ್ಯಗಳು ಆರಂಭವಾದವು. ಈ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಬ್ರಿಟಿಷರ ಕಾಲದಲ್ಲಿ ಮುಜರಾಯಿ ಇಲಾಖೆ ಪ್ರಾರಂಭವಾಯಿತು. ವಂಶಪಾರಂಪರ್ಯದ ದೇವಸ್ಥಾನಗಳನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ತರುವ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರು ಒಂದು ಕಾಯ್ದೆ ತಂದರೆ ಇಡೀ ದೇಶಕ್ಕೆ ಅನ್ವಯವಾಗಲಿದೆ. ಹೀಗಾಗಿ ಕೇಂದ್ರ ಸರ್ಕಾರವೇ ಈ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿ ಎಂದು ಹೇಳಿದರು.






















































