
ಬೆಳಗಾವಿ: ಡಿಸಿಎಂ ಡಿ.ಕೆ.ಶಿವಕುಮಾರ್ ಸುದ್ದಿಗಾರರೊಂದಿಗೆ ಮಾತನಾಡಿ, ಗುರುವಾರ ಶಾಸಕರ ಜತೆ ಔತಣಕೂಟದ ಬಗ್ಗೆ ಪ್ರತಿಕ್ರಿಯಿಸಿದ ಅವರು ದಿನ ಒಬ್ಬೊಬ್ಬ ಸ್ಥಳೀಯರು, ನಮ್ಮ ಕ್ಷೇತ್ರದವರು ಪ್ರೀತಿಯಿಂದ ಊಟ ತಂದು ಕೊಡುತ್ತಿದ್ದಾರೆ. ಊಟ ಬೇಡ ಎನ್ನಲು ಆಗುತ್ತದೆಯೇ? ಪ್ರೀತಿಯಿಂದ ಕರೆಯುತ್ತಾರೆ. ಅದಕ್ಕೆ ಒಂದೊಂದು ದಿನ ಒಂದೊಂದು ಕಡೆ ಊಟಕ್ಕೆ ಹೋಗುತ್ತೇವೆ. ಇದು ಯಾವ ಔತಣಕೂಟವೂ ಅಲ್ಲ ಎಂದು ಹೇಳಿದರು.
ಕಳೆದ 15 ವರ್ಷಗಳಿಂದ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ದೊಡ್ಡಣ್ಣನವರ ಮನೆಗೆ ಊಟಕ್ಕೆ ಬನ್ನಿ ಎಂದು ಕರೆಯುತ್ತಿದ್ದರು. ನಾವೆಲ್ಲ ಹೋಗಿದ್ದೆವು. ನನ್ನ ಕ್ಷೇತ್ರದ ಹುಡುಗನೊಬ್ಬ ಇಲ್ಲಿ ಕೆಲಸ ಮಾಡುತ್ತಿದ್ದಾನೆ. ಆತ ಮುದ್ದೆ, ಉಪ್ಸಾರು ಊಟ ಮಾಡಿ ಕಳಿಸುತ್ತೇವೆ ಎನ್ನುತ್ತಿದ್ದಾನೆ. ನಾಡಿದ್ದು ನಮ್ಮ ಆಸೀಫ್ ಸೇಠ್, ಫಿರೋಜ್ ಸೇಠ್ ಊಟಕ್ಕೆ ಕರೆದಿದ್ದಾರೆ ಎಂದು ಹೇಳಿದರು.





