ಸದನದಲ್ಲಿ ಸ್ಪಷ್ಟನೆ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ವಿಧಾನಸಭೆ ಅಧಿವೇಶನದಲ್ಲಿ ಗೃಹಲಕ್ಷ್ಮಿ ಯೋಜನೆ ಹಣದ ವಿಚಾರವಾಗಿ ತಪ್ಪು ಮಾಹಿತಿ ನೀಡಿ ತೀವ್ರ ಟೀಕೆ, ವಿರೋಧಕ್ಕೆ ಗುರಿಯಾಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬುಧವಾರ ಸದನದಲ್ಲಿ ಈ ಕುರಿತು ಪ್ರತಿಕ್ರಿಯಿಸಿ ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಹಣ ಪಾವತಿಯಲ್ಲಿ ವಿಳಂಬವಾಗಿದೆ. ತನಗೆ ಜವಾಬ್ದಾರಿಯ ಅರಿವಿದ್ದು, ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದ್ದಾರೆ.
ಎರಡು ತಿಂಗಳ ಹಣ ಪಾವತಿಯಲ್ಲಿ ವ್ಯತ್ಯಯವಾಗಿರುವುದು ಪರಿಶೀಲನೆ ವೇಳೆ ಬೆಳಕಿಗೆ ಬಂದಿದ್ದು, ಮುಂದಿನ ದಿನಗಳಲ್ಲಿ ಅದನ್ನು ಸರಿಪಡಿಸುತ್ತೇವೆ. ಆದರೆ ಹಣವನ್ನು ಬೇರೆ ಕಡೆಗೆ ವರ್ಗಾಯಿಸಲಾಗಿಲ್ಲ ಅಥವಾ ಯಾವುದೇ ದುರುಪಯೋಗವಾಗಿಲ್ಲ ಎಂದು ಸಚಿವೆ ಸ್ಪಷ್ಟನೆ ನೀಡಿದರು.





