
ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅಡುಗೆ ಅನಿಲದ ದರವನ್ನು ಹೆಚ್ಚಿಸುವ ಮೂಲಕ ಮಹಿಳೆಯರಿಗೆ ‘ಉಡುಗೊರೆ’ ನೀಡಿದಂತೆ ಕೇಂದ್ರ ಸರ್ಕಾರ ನಡೆದುಕೊಂಡಿದೆ. ಈ ವಿಷಯದ ಕುರಿತು ಪ್ರತಿಕ್ರಿಯಿಸಲು ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿ ಕಾಣಿಸಿಕೊಳ್ಳುತ್ತಿಲ್ಲ ಎಂದು ಟೀಕಿಸಿದ್ದಾರೆ.
ಈ ಹಿಂದೆ ಅಡುಗೆ ಅನಿಲದ ಬೆಲೆ 10 ಅಥವಾ 20 ರೂಪಾಯಿ ಹೆಚ್ಚಾದಾಗಲೂ ಸ್ಮೃತಿ ಇರಾನಿ ತೀವ್ರವಾಗಿ ಪ್ರತಿಭಟನೆ ನಡೆಸುತ್ತಿದ್ದರು. ಆದರೆ ಈಗ ಬೆಲೆ ಏರಿಕೆಯಾದಾಗ ಅವರು ಯಾಕೆ ಮೌನವಾಗಿದ್ದಾರೆ, ಎಲ್ಲಿಗೆ ಹೋಗಿದ್ದಾರೆ ಎಂದು ಪ್ರಶ್ನಿಸಿದರು.
ಇದೀಗ ಯುದ್ಧ ಪರಿಸ್ಥಿತಿ ಉಂಟಾಗಿರುವ ಕಾರಣ ಪೆಟ್ರೋಲ್, ಡೀಸೆಲ್ ಹಾಗೂ ಅನಿಲದ ದರಗಳು ಏರಿಕೆಯಾಗುತ್ತಿವೆ. ಪ್ರಸ್ತುತ ಪರಿಸ್ಥಿತಿ ಕೇವಲ ಆರಂಭ ಮಾತ್ರವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಆದ್ದರಿಂದ ಕೇಂದ್ರ ಸರ್ಕಾರ ತಕ್ಷಣ ಎಚ್ಚೆತ್ತು ಗ್ರಾಹಕರು ಹಾಗೂ ಹೋಟೆಲ್ ಉದ್ಯಮಿಗಳ ಹಿತವನ್ನು ಕಾಪಾಡುವ ಕ್ರಮ ಕೈಗೊಳ್ಳಬೇಕು ಎಂದರು.


ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ಡಿ.ಕೆ. ಶಿವಕುಮಾರ್ ಅವರ ಕನಸಾಗಿತ್ತು ಮತ್ತು ಅದು ಈಗ ನನಸಾಗಿದೆ. ಮುಂದಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಹೇಳಿದರು.







