
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸ್ಪಷ್ಟನೆ ನೀಡಿದ್ದು, ವಿಶೇಷವಾಗಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಸಿಇಟಿ ಫಲಿತಾಂಶದ ಬಗ್ಗೆ ಯಾವುದೇ ಗೊಂದಲಕ್ಕೆ ಒಳಗಾಗಬಾರದು ಎಂದು ತಿಳಿಸಿದೆ. ಪರೀಕ್ಷೆ-1 ಹಾಗೂ ಪರೀಕ್ಷೆ-2ರಲ್ಲಿ ಪಡೆದ ಅಂಕಗಳ ಪೈಕಿ ಹೆಚ್ಚು ಅಂಕಗಳನ್ನು ಪಡೆದಿರುವ ಫಲಿತಾಂಶವನ್ನೇ ಸಿಇಟಿ ರ್ಯಾಂಕ್ ಲೆಕ್ಕಾಚಾರಕ್ಕೆ ಬಳಸಲಾಗುತ್ತದೆ ಎಂದು ತಿಳಿಸಲಾಗಿದೆ.
ಪರೀಕ್ಷೆ-1ರಲ್ಲಿ ತೃಪ್ತಿಕರ ಅಂಕಗಳು ಸಿಗದ ಕಾರಣ, ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಳ್ಳಲು ಕೆಲವು ವಿದ್ಯಾರ್ಥಿಗಳು ಪರೀಕ್ಷೆ-2ಗೆ ಹಾಜರಾಗುತ್ತಿದ್ದಾರೆ. ಇಂತಹ ವಿದ್ಯಾರ್ಥಿಗಳಿಗೆ ಕಳೆದ ವರ್ಷದಂತೆ ಎರಡೂ ಪರೀಕ್ಷೆಗಳಲ್ಲಿನ ಅತ್ಯುತ್ತಮ ಅಂಕಗಳನ್ನು ಪರಿಗಣಿಸುವುದಾಗಿ ಪ್ರಾಧಿಕಾರ ತಿಳಿಸಿದೆ. ಎರಡೂ ಪರೀಕ್ಷೆಗಳ ಫಲಿತಾಂಶ ಪ್ರಕಟವಾದ ನಂತರವೇ ಸಿಇಟಿ ರ್ಯಾಂಕ್ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.
ಪರೀಕ್ಷೆ-2 ಅಂಕಗಳನ್ನು ಪರಿಗಣಿಸಲಾಗುವುದಿಲ್ಲ ಎಂಬ ಮಾಹಿತಿ ಸಂಪೂರ್ಣ ತಪ್ಪು ಎಂದು ಹೇಳಿರುವ ಅವರು, ಇಂತಹ ವದಂತಿಗಳಿಗೆ ವಿದ್ಯಾರ್ಥಿಗಳು ಕಿವಿಗೊಡಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ 2026ರ ಸಿಇಟಿ ಪರೀಕ್ಷೆ ಏಪ್ರಿಲ್ 23 ಮತ್ತು 24ರಂದು ನಡೆಯಲಿದ್ದು, ಈ ಕುರಿತು ಈಗಾಗಲೇ ಪ್ರಾಧಿಕಾರ ಅಧಿಕೃತ ಸುತ್ತೋಲೆ ಹೊರಡಿಸಿದೆ. ಜೊತೆಗೆ, ಅರ್ಜಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಲು ಅವಕಾಶ ನೀಡಲಾಗಿದೆ.











