
ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆ ಕುರಿತು ರಾಜ್ಯ ಸರ್ಕಾರವನ್ನು ಪ್ರಶ್ನಿಸುವವರು, ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡಿದಾಗ ಮೌನವಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಯವರು 2014ರಲ್ಲಿ ಅಧಿಕಾರಕ್ಕೆ ಬಂದಾಗ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ದರಗಳು ಕಡಿಮೆಯಾಗಿದ್ದವು. ಈಗ ಅವುಗಳ ಬೆಲೆ ಭಾರೀ ಏರಿಕೆಯಾಗಿರುವುದಕ್ಕೆ ಕೇಂದ್ರ ಸರ್ಕಾರವೇ ಕಾರಣ ಎಂದು ಆರೋಪಿಸಿದರು.
ಪೆಟ್ರೋಲ್, ಡೀಸೆಲ್ ಮೇಲೆ ರಾಜ್ಯ ತೆರಿಗೆ ಕಡಿತದ ಕುರಿತು ಕೇಳಿದ ಪ್ರಶ್ನೆಗೆ ನೇರ ಉತ್ತರ ನೀಡದ ಸಿದ್ದರಾಮಯ್ಯ, ಬಳಿಕ ಫ್ರೀಡಂ ಪಾರ್ಕ್ನಲ್ಲಿ ನಡೆದ ಯುವ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳಿಂದ ವಿದ್ಯಾರ್ಥಿಗಳು ಸಂಕಷ್ಟ ಅನುಭವಿಸಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು. ಅವರು ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.



























