
ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ನಡುವಿನ ಬಹುಕಾಲದ ಕಾನೂನು ಸಂಘರ್ಷಕ್ಕೆ ಅಂತ್ಯ ಕಾಣಿಸಲು ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿದೆ. ಈ ಸಂಬಂಧ ಇಬ್ಬರ ನಡುವೆ ಸಂಧಾನ ನಡೆಸಲು ಕ್ರಮ ಕೈಗೊಂಡಿದೆ.
ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಜಸ್ಟಿಸ್ ಕುರಿಯನ್ ಜೋಸೆಫ್ ಅವರನ್ನು ಸಂಧಾನಕಾರರಾಗಿ ನೇಮಿಸಲಾಗಿದೆ. ಕೋರ್ಟ್ ಹೊರಗೆ ಮಾತುಕತೆ ಮೂಲಕ ವಿವಾದ ಬಗೆಹರಿಸಿಕೊಳ್ಳುವಂತೆ ಇಬ್ಬರು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಸುಪ್ರೀಂ ಕೋರ್ಟ್ ಸಲಹೆಗೆ ಇಬ್ಬರೂ ಅಧಿಕಾರಿಗಳು ಒಪ್ಪಿಗೆ ಸೂಚಿಸಿರುವುದಾಗಿ ತಿಳಿದು ಬಂದಿದೆ. ಸಾರ್ವಜನಿಕ ಹುದ್ದೆಯಲ್ಲಿರುವ ಅಧಿಕಾರಿಗಳು ಬಹಿರಂಗವಾಗಿ ಸಂಘರ್ಷ ನಡೆಸುವುದು ಸೂಕ್ತವಲ್ಲ ಎಂಬ ಅಭಿಪ್ರಾಯವನ್ನೂ ನ್ಯಾಯಾಲಯ ವ್ಯಕ್ತಪಡಿಸಿದೆ.
2023ರ ಫೆಬ್ರವರಿಯಲ್ಲಿ ಡಿ. ರೂಪಾ ಸಾಮಾಜಿಕ ಜಾಲತಾಣದಲ್ಲಿ ರೋಹಿಣಿ ಸಿಂಧೂರಿ ವಿರುದ್ಧ ಆರೋಪ ಮಾಡಿ ಪೋಸ್ಟ್ ಹಂಚಿಕೊಂಡಿದ್ದರು. ಇದನ್ನು ಆಧರಿಸಿ ರೋಹಿಣಿ ಸಿಂಧೂರಿ ಮಾನಹಾನಿ ಮೊಕದ್ದಮೆ ದಾಖಲಿಸಿದ್ದು, ಬಳಿಕ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿತ್ತು.

































