
ಬೆಂಗಳೂರು: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ. ಮುಂದಿನ ಅವಧಿಯಲ್ಲೂ ಯೋಜನೆಗಳು ಮುಂದುವರಿಯಲಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಎಕ್ಸ್ ಪೋಸ್ಟ್‌ನಲ್ಲಿ ಅವರು, ‘ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಕಂಡುಬರುವ ದೋಷಗಳನ್ನು ಸರಿಪಡಿಸುವ ಪ್ರಕ್ರಿಯೆ ಆರಂಭದಿಂದಲೇ ನಡೆಯುತ್ತಿದ್ದು, ಈಗಲೂ ಮುಂದುವರಿದಿದೆ. ಫಲಾನುಭವಿಗಳು ವಿರೋಧ ಪಕ್ಷಗಳ ಅಪಪ್ರಚಾರಕ್ಕೆ ಕಿವಿಗೊಡಬಾರದು” ಎಂದು ಮನವಿ ಮಾಡಿದ್ದಾರೆ.
ಬಿಜೆಪಿ ಆರಂಭದಿಂದಲೇ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದ್ದು, ಈಗ ಯೋಜನೆಗಳನ್ನು ನಿಲ್ಲಿಸಲಾಗುತ್ತದೆ ಎಂಬ ವದಂತಿ ಹಬ್ಬಿಸುತ್ತಿದೆ. ರಾಜ್ಯದ ಆರ್ಥಿಕ ಸ್ಥಿತಿ ಬಲವಾಗಿದ್ದು, ತಲಾವಾರು ಆದಾಯ ಹಾಗೂ ಜಿಎಸ್‌ಟಿ ಸಂಗ್ರಹದಲ್ಲೂ ಕರ್ನಾಟಕ ಮುಂಚೂಣಿಯಲ್ಲಿದೆ ಎಂದು ಹೇಳಿದ್ದಾರೆ.
ಅರ್ಹರಿಗೆ ಮಾತ್ರ ಯೋಜನೆಗಳ ಲಾಭ ತಲುಪಬೇಕು. ನಕಲಿ ದಾಖಲೆಗಳ ಮೂಲಕ ಸೌಲಭ್ಯ ಪಡೆಯುವುದನ್ನು ತಡೆಯುವುದು ಸರ್ಕಾರದ ಜವಾಬ್ದಾರಿ ಎಂದು ಅವರು ತಿಳಿಸಿದ್ದಾರೆ.
ಇದೇ ವೇಳೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿ, ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಫಲಾನುಭವಿಗಳ ಮಾಹಿತಿ ಪರಿಶೀಲನೆಗಾಗಿ ಮರು ದೃಢೀಕರಣ ಪ್ರಕ್ರಿಯೆ ನಡೆಸಲಾಗುತ್ತಿದೆ ಹೊರತು ಯೋಜನೆ ಸ್ಥಗಿತಗೊಳಿಸುವ ಉದ್ದೇಶ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

































