ಅಕ್ರಮದ ಬಗ್ಗೆ ತನಿಖೆಗೆ ಸೂಚನೆ

ಬೆಂಗಳೂರು: ರಾಮನಗರ ಜಿಲ್ಲೆಯ ಮಾದಪಟ್ಟಣ ಗ್ರಾಮದ ಸಮೀಪದ ಕಾವೇರಿ ಕ್ರಷರ್ನಲ್ಲಿ ಸಂಭವಿಸಿದ ಭೀಕರ ಬಂಡೆ ಕುಸಿತ ದುರಂತದಲ್ಲಿ ಬಿಹಾರ ಮೂಲದ ಏಳು ಕಾರ್ಮಿಕರು ಮೃತಪಟ್ಟಿದ್ದಾರೆ. ಕಲ್ಲು ಕ್ರಷರ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಬಂಡೆ ಕುಸಿದ ಪರಿಣಾಮ ಈ ಅವಘಡ ಸಂಭವಿಸಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ದುರಂತದ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲಾಗುವುದು ಎಂದು ತಿಳಿಸಿದ್ದಾರೆ. ಪ್ರಕರಣದಲ್ಲಿ ತಮ್ಮ ಇಲಾಖೆಯ ವ್ಯಾಪ್ತಿಗೆ ಬರುವ ಯಾವುದೇ ಅಂಶ ಕಂಡುಬಂದರೆ ತಕ್ಷಣ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.
ಅಲ್ಲದೆ, ಕ್ರಷರ್ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿತ್ತೇ ಎಂಬುದರ ಕುರಿತು ಸಮಗ್ರ ತನಿಖೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.








































