
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಘೋಷಿಸಿದ್ದ ರಾಜ್ಯದಾದ್ಯಂತ 10 ಸಾವಿರ ‘ಭಾರತ್ ಜೋಡೋ ಯುವ ಸಂಘ’ಗಳ ಸ್ಥಾಪನೆಗೆ ರಾಜ್ಯ ಸರ್ಕಾರ ಸೋಮವಾರ ಅಧಿಕೃತ ಆದೇಶ ಹೊರಡಿಸಿದೆ.
ಯುವಕರಲ್ಲಿ ನಾಯಕತ್ವ, ಕ್ರೀಡಾ ಮನೋಭಾವ, ಸಂಸ್ಕೃತಿ, ವೈಜ್ಞಾನಿಕ ಚಿಂತನೆ ಹಾಗೂ ಸಾಮಾಜಿಕ ಸಾಮರಸ್ಯ ಬೆಳೆಸುವ ಉದ್ದೇಶದಿಂದ ಗ್ರಾಮ ಪಂಚಾಯಿತಿಗಳಲ್ಲಿ 6 ಸಾವಿರ ಮತ್ತು ನಗರ ವಾರ್ಡ್‌ಗಳಲ್ಲಿ 4 ಸಾವಿರ ಸಂಘಗಳನ್ನು ರಚಿಸಲಾಗುತ್ತದೆ. ಪ್ರತಿ ಸಂಘಕ್ಕೆ ವರ್ಷಕ್ಕೆ 10 ಲಕ್ಷ ರೂ. ಅನುದಾನ ನೀಡಲಾಗುತ್ತಿದ್ದು, ಒಟ್ಟು 1,000 ಕೋಟಿ ರೂ. ವೆಚ್ಚದಲ್ಲಿ ಯೋಜನೆ ಜಾರಿಯಾಗಲಿದೆ.
ಈ ಕುರಿತು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಗ್ರಾಮ ಪಂಚಾಯಿತಿ ಹಾಗೂ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಜನಸಂಖ್ಯೆ ಆಧಾರವಾಗಿ ಸಂಘಗಳನ್ನು ರಚಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಯೋಜನೆಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅನುಷ್ಠಾನಗೊಳಿಸಲಿದ್ದು, ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ, ಕಂದಾಯ ಹಾಗೂ ಶಿಕ್ಷಣ ಇಲಾಖೆಗಳು ಸಹಕಾರ ನೀಡಲಿವೆ. ಯುವಕರನ್ನು ನಾಯಕತ್ವದ ಗುಣಗಳಿಂದ ಸಬಲೀಕರಿಸಿ ಉತ್ತಮ ನಾಗರಿಕರನ್ನಾಗಿ ರೂಪಿಸುವುದು ಇದರ ಉದ್ದೇಶ ಎಂದು ಅವರು ಹೇಳಿದ್ದಾರೆ.
ಯಾರು ಸದಸ್ಯರಾಗಬಹುದು?
ಭಾರತ್ ಜೋಡೋ ಯುವ ಸಂಘದ ಸದಸ್ಯತ್ವಕ್ಕೆ 16 ರಿಂದ 35 ವರ್ಷದೊಳಗಿನ ಯುವಕ-ಯುವತಿಯರು ಅರ್ಹರು. ಪ್ರತಿ ಸಂಘದಲ್ಲಿ ಕನಿಷ್ಠ 100 ಸದಸ್ಯರು ಇರಬೇಕು. ಅರ್ಜಿದಾರರು ಅದೇ ಗ್ರಾಮ ಪಂಚಾಯಿತಿ ಅಥವಾ ವಾರ್ಡ್‌ನ ನಿವಾಸಿಗಳಾಗಿರಬೇಕು. ಒಬ್ಬ ವ್ಯಕ್ತಿ ಒಂದು ಸಂಘದಲ್ಲಿ ಮಾತ್ರ ಸದಸ್ಯರಾಗಲು ಅವಕಾಶವಿದೆ.











































