
ಬೆಂಗಳೂರು: 2028ರ ವಿಧಾನಸಭೆ ಚುನಾವಣೆಯಲ್ಲಿ ತಾನು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವರುಣಾ ಕ್ಷೇತ್ರದ ಶಾಸಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಆದರೆ ಸಕ್ರಿಯ ರಾಜಕಾರಣದಲ್ಲಿ ಮುಂದುವರಿದು ಜನರ ಕಷ್ಟ–ಸುಖಗಳಿಗೆ ಧ್ವನಿಯಾಗಿ ಕೆಲಸ ಮಾಡುತ್ತೇನೆ ಎಂದು ಅವರು ತಿಳಿಸಿದ್ದಾರೆ.
ಎಕ್ಸ್ ಖಾತೆಯಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಸಿದ್ದರಾಮಯ್ಯ, “ವರುಣ ಕ್ಷೇತ್ರದ ಜನರು ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ ನಾನು ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂದು ನಿರ್ಧರಿಸಿದ್ದೇನೆ. ಈಗ ನನಗೆ 79 ವರ್ಷ. 2028ರ ವೇಳೆಗೆ 82 ವರ್ಷವಾಗಲಿದ್ದು, ಆರೋಗ್ಯ ಮತ್ತು ವಯಸ್ಸಿನ ಕಾರಣದಿಂದ ಹಿಂದಿನಂತೆ ಉತ್ಸಾಹದಿಂದ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ” ಎಂದು ಹೇಳಿದ್ದಾರೆ.
“1978ರಲ್ಲಿ ಆರಂಭವಾದ ನನ್ನ ರಾಜಕೀಯ ಜೀವನಕ್ಕೆ 2028ರಲ್ಲಿ 50 ವರ್ಷಗಳು ಪೂರ್ಣಗೊಳ್ಳಲಿವೆ. ಸೋಲು-ಗೆಲುವು ಎಲ್ಲವನ್ನೂ ಕಂಡಿದ್ದೇನೆ. ಆದರೆ ನಂಬಿದ ಸಿದ್ಧಾಂತಕ್ಕೆ ವಿರುದ್ಧವಾಗಿ ನಡೆದಿಲ್ಲ, ಆತ್ಮಸಾಕ್ಷಿಗೆ ದ್ರೋಹ ಬಗೆದಿಲ್ಲ ಎಂಬ ತೃಪ್ತಿ ಇದೆ. ಇಂದಿನ ರಾಜಕಾರಣ ಸಾಕಷ್ಟು ಕಲುಷಿತವಾಗಿದ್ದು, ಚುನಾವಣೆಯಲ್ಲಿ ಸ್ಪರ್ಧಿಸಲು ಜನರಿಗೆ ಹಣ ನೀಡಬೇಕಾದ ಪರಿಸ್ಥಿತಿ ಬಂದಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯುವ ನಿರ್ಧಾರ ಕೈಗೊಂಡಿದ್ದೇನೆ. ಆದರೆ ನನ್ನ ಮುಂದಿನ ಜೀವನವನ್ನೂ ಜನಸೇವೆಗೆ ಮುಡಿಪಾಗಿಡುತ್ತೇನೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.


















































