
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಮತ್ತು ಮಲೆನಾಡಿನ ಭಾಗಗಳಲ್ಲಿ 30 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿಯ ಜೊತೆ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜುಲೈ 28 ಮತ್ತು 29ರಂದು ಬಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರಿ ಮಳೆ ಆಗಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.


















































