
ಮಂಗಳೂರು: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಎನ್ಐಎ ಮೋಸ್ಟ್ ವಾಂಟೆಡ್ ಆರೋಪಿ ಉಮ್ಮರ್ ಫಾರೂಕ್ ಎಂ.ಆರ್.ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಕೇರಳದ ಕೊಚ್ಚಿಯಲ್ಲಿ ಬಂಧಿಸಿದೆ. ಈ ಬಂಧನದೊಂದಿಗೆ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಉಮ್ಮರ್ ಫಾರೂಕ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಹಾಗೂ ಜಾಮೀನು ರಹಿತ ಬಂಧನ ವಾರಂಟ್ ಜಾರಿಯಾಗಿದ್ದು, ಆತನ ಬಂಧನಕ್ಕೆ ₹4 ಲಕ್ಷ ಬಹುಮಾನ ಘೋಷಿಸಲಾಗಿತ್ತು.
ಎನ್ಐಎ ತನಿಖೆ ಪ್ರಕಾರ, ಉಮ್ಮರ್ ಫಾರೂಕ್ ಪಿಎಫ್ಐ ಕಚೇರಿಯಲ್ಲಿ ನಡೆದಿದ್ದ ಸಂಚು ಸಭೆಯಲ್ಲಿ ಭಾಗಿಯಾಗಿದ್ದಾನೆ ಎನ್ನಲಾಗಿದೆ. ಪ್ರವೀಣ್ ನೆಟ್ಟಾರು ಹತ್ಯೆಗೆ ಬಳಸಲಾದ ಬೈಕ್ ಒದಗಿಸಿದ್ದ ಆರೋಪವೂ ಆತನ ಮೇಲಿದೆ. ಅಲ್ಲದೆ, ಪ್ರಕರಣದ ಸಾಕ್ಷಿದಾರನ ಹತ್ಯೆಗೆ ಯತ್ನಿಸಿದ ಪ್ರಕರಣದಲ್ಲಿಯೂ ಆತ ಭಾಗಿಯಾಗಿದ್ದಾನೆ ಎಂದು ತನಿಖೆಯಲ್ಲಿ ಉಲ್ಲೇಖಿಸಲಾಗಿದೆ. ಹತ್ಯೆಯ ನಂತರ ಪ್ರಮುಖ ಆರೋಪಿಗಳು ತಪ್ಪಿಸಿಕೊಳ್ಳಲು ಸಹಾಯ ಮಾಡಿದ್ದ ಆತ, ಬಳಿಕ ಕೊಚ್ಚಿಯಲ್ಲಿ ಅಡಗಿಕೊಂಡಿದ್ದ ಎಂದು ಎನ್ಐಎ ತಿಳಿಸಿದೆ.
ಕಳೆದ ನಾಲ್ಕು ವರ್ಷಗಳಿಂದ ನಿಷೇಧಿತ ಪಿಎಫ್ಐ ಸಂಘಟನೆಯ ಪ್ರಮುಖರ ನೆರವಿನಿಂದ ಕೊಚ್ಚಿಯ ಅಜ್ಞಾತ ಸ್ಥಳದಲ್ಲಿ ಉಮ್ಮರ್ ಫಾರೂಕ್ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಜುಲೈ 11ರಂದು ಬಂಧಿತ ಆರೋಪಿಗಳಾದ ನೌಷಾದ್ ಮತ್ತು ನಸೀರ್ ನೀಡಿದ ಮಾಹಿತಿಯ ಆಧಾರದಲ್ಲಿ ಎನ್ಐಎ ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಪ್ರಕರಣದಲ್ಲಿ ಇನ್ನೂ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಪ್ರವೀಣ್ ನೆಟ್ಟಾರು ಅವರನ್ನು 2022ರ ಜುಲೈ 26ರಂದು ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಅಂಗಡಿ ಮುಚ್ಚಿ ಮನೆಗೆ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದರು. ರಾಜ್ಯಾದ್ಯಂತ ಭಾರೀ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಪ್ರಕರಣವನ್ನು ಎನ್ಐಎಗೆ ಹಸ್ತಾಂತರಿಸಿತ್ತು. ಎನ್ಐಎ ದೋಷಾರೋಪಣಾ ಪಟ್ಟಿಯಲ್ಲಿ, ನಿಷೇಧಿತ ಪಿಎಫ್ಐ ನಾಯಕರು ಹಾಗೂ ಅದರ ಸರ್ವಿಸ್ ಟೀಮ್ ಸದಸ್ಯರು ಸಂಚು ರೂಪಿಸಿ ಹತ್ಯೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದ್ದು, ತನಿಖೆ ಇನ್ನೂ ಮುಂದುವರಿದಿದೆ.

























































