
ಕಾರ್ಕಳ: ಕರ್ನಾಟಕ ರಾಜ್ಯದ ಆರೋಗ್ಯ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಫರೀದ್ ಅವರು ಶನಿವಾರ ಕಾರ್ಕಳ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಕಾರ್ಯಾಲಯಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಕಾರ್ಕಳ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಸಮಿತಿಯ ಕಾರ್ಯಾಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಸಚಿವರನ್ನು ಗೌರವಪೂರ್ವಕವಾಗಿ ಸ್ವಾಗತಿಸಿ, ಮುಂದಿನ ವರ್ಷ ನಡೆಯಲಿರುವ ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಸರ್ಕಾರದ ಸಂಪೂರ್ಣ ಸಹಕಾರ ನೀಡುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಯು.ಟಿ. ಖಾದರ್ ಫರೀದ್, ಜೈನ ಧರ್ಮವು ಸಾರುವ ಅಹಿಂಸೆ, ಸಂಯಮ, ತ್ಯಾಗ, ಸತ್ಯ ಹಾಗೂ ಮಾನವೀಯ ಮೌಲ್ಯಗಳ ಮಹತ್ವವನ್ನು ಸಮಾಜದಲ್ಲಿ ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕಾರ್ಕಳದ ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ ಮಹೋತ್ಸವ ನಡೆಯುತ್ತದೆ. ಈ ಧಾರ್ಮಿಕ ಹಾಗೂ ಸಾಂಸ್ಕೃತಿಕ ಮಹೋತ್ಸವಕ್ಕೆ ಸರ್ಕಾರದ ವತಿಯಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಬಳಿಕ ಸಚಿವರು ಶ್ರೀ ಕ್ಷೇತ್ರ ಕಾರ್ಕಳದಲ್ಲಿ ಚಾತುರ್ಮಾಸ ವ್ರತಾಚರಣೆಯಲ್ಲಿರುವ ಪರಮಪೂಜ್ಯ ೧೦೮ ಏಲಾಚಾರ್ಯ ಶ್ರೀ ಪ್ರಸಂಗ ಸಾಗರ ಮುನಿಮಹಾರಾಜರು ಹಾಗೂ ಪರಮಪೂಜ್ಯ ಲಲಿತಕೀರ್ತಿ ಭಟ್ಟಾರಕರ ಮಹಾಸ್ವಾಮಿಗಳನ್ನು ಭೇಟಿ ಮಾಡಿ, ಅವರ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಮಹಾಮಸ್ತಕಾಭಿಷೇಕ ಸಮಿತಿಯ ಕಾರ್ಯಾಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಪೂರ್, ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಕುಮಾರ್ ಶೆಟ್ಟಿ, ಜೈನ ಸಮಾಜದ ಮುಖಂಡರಾದ ಅನಂತರಾಜ ಪೂವಣಿ, ಮೋಹನ್ ಪಡಿವಾಳ್, ಸಿಎ ಪ್ರಭಾತ್ ಕುಮಾರ್, ಪುಷ್ಪರಾಜ್ ಜೈನ್, ಮಹಾವೀರ ಹೆಗ್ಡೆ, ಸುನಿಲ್ ಕುಮಾರ್ ಬಜಗೋಳಿ ಮೊದಲಾದವರು ಉಪಸ್ಥಿತರಿದ್ದರು.

























































