ಇಂದು-ನಾಳೆ ಅಧಿಕೃತ ಆದೇಶ ಸಾಧ್ಯತೆ

ಬೆಂಗಳೂರು: ಕರ್ನಾಟಕದಲ್ಲಿ ಗುಟ್ಕಾ ಮಾರಾಟಕ್ಕೆ ನಿಷೇಧ ಹೇರಿರುವ ಆದೇಶವನ್ನು ಹಿಂಪಡೆಯುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ. ಸರ್ಕಾರದ ಈ ಕ್ರಮಕ್ಕೆ ಶಾಸಕರ ವಲಯದಲ್ಲಿ, ವಿಶೇಷವಾಗಿ ಕಾಂಗ್ರೆಸ್ ಪಕ್ಷದ ಶಾಸಕರಿಂದಲೇ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಆದೇಶವನ್ನು ಹಿಂತೆಗೆದುಕೊಳ್ಳಲು ನಿರ್ಧರಿಸಲಾಗಿದೆ.
ಗುಟ್ಕಾ ನಿಷೇಧದ ವಿಚಾರವಾಗಿ ಚರ್ಚೆ ನಡೆಸಲು ಹಿರಿಯ ಶಾಸಕರ ತಂಡ ನಿನ್ನೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮನವಿ ಮಾಡಿತ್ತು. ಈ ವೇಳೆ ನಿಷೇಧಕ್ಕೆ ಸಂಬಂಧಿಸಿದ ಆದೇಶದ ಬಗ್ಗೆ ತಮ್ಮ ಗಮನಕ್ಕೆ ತರಲಾಗಿರಲಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.
ನಂತರ ನಡೆದ ಸಚಿವ ಸಂಪುಟ ಸಭೆಯಲ್ಲಿಯೂ ಗುಟ್ಕಾ ನಿಷೇಧದ ವಿಚಾರ ಚರ್ಚೆಗೆ ಬಂದಿದೆ. ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಸಿಎಂ, ತಮ್ಮ ಗಮನಕ್ಕೆ ತರದೆ ಇಂತಹ ಮಹತ್ವದ ಆದೇಶವನ್ನು ಹೇಗೆ ಹೊರಡಿಸಲಾಗಿದೆ ಎಂದು ಪ್ರಶ್ನಿಸಿದ್ದಾರೆ.
ಗುಟ್ಕಾ ನಿಷೇಧದಿಂದ ರಾಜ್ಯದ ಸುಮಾರು ಏಳೆಂಟು ಜಿಲ್ಲೆಗಳ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದ್ದು ಈ ಹಿನ್ನೆಲೆಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ನಿಷೇಧ ಆದೇಶವನ್ನು ಕೂಡಲೇ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.




























































