ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ, ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

ಮೂಡುಬಿದಿರೆ: ಭಾರತವು ವಿಶ್ವದ ಎಲ್ಲ ರಾಷ್ಟ್ರಗಳಿಗೂ ಮಾರ್ಗದರ್ಶಕವಾಗಿರುವ ಶ್ರೇಷ್ಠ ದೇಶ. ಈ ನೆಲದ ಹಿರಿಮೆ, ಸಂಸ್ಕೃತಿ ಹಾಗೂ ಪರಂಪರೆಯ ಗೌರವವನ್ನು ಕಾಪಾಡಿಕೊಳ್ಳುವುದು ಪ್ರತಿಯೊಬ್ಬ ಭಾರತೀಯನ ಜವಾಬ್ದಾರಿಯಾಗಬೇಕು ಎಂದು ಮುಲ್ಕಿ–ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.
ಮೂಡುಬಿದಿರೆಯ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ದೇಶ ಎದುರಿಸುತ್ತಿರುವ ಸವಾಲುಗಳನ್ನು ಧೈರ್ಯದಿಂದ ಮೆಟ್ಟಿ ನಿಂತು ರಾಷ್ಟ್ರದ ಗೌರವವನ್ನು ಎತ್ತಿಹಿಡಿಯುವ ಮನೋಭಾವ ಪ್ರತಿಯೊಬ್ಬರಲ್ಲೂ ಬೆಳೆಯಬೇಕು ಎಂದರು. ಭಾರತದ ಶ್ರೀಮಂತ ಸಂಸ್ಕೃತಿ, ಸಂಸ್ಕಾರ ಮತ್ತು ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಸಮರ್ಥವಾಗಿ ಹಸ್ತಾಂತರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡು, ಸಂವಿಧಾನದ ಆಶಯಗಳನ್ನು ಗೌರವಿಸುವ ಸತ್ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಅವರು ಕರೆ ನೀಡಿದರು.
ಇದೇ ಸಂದರ್ಭದಲ್ಲಿ 2026ನೇ ಸಾಲಿನ NCERT Common Entrance Examination (CEE) ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದು ಅಖಿಲ ಭಾರತ 25ನೇ ರ‍್ಯಾಂಕ್ (AIR 25) ಗಳಿಸಿದ ಎಕ್ಸಲೆಂಟ್ ಸಂಸ್ಥೆಯ ವಿದ್ಯಾರ್ಥಿನಿ ಮೌಲ್ಯ ಆರ್. ಜೈನ್ ಅವರನ್ನು ಅಭಿನಂದಿಸಿ ಗೌರವಿಸಲಾಯಿತು. ಅಲ್ಲದೆ, NCC ಕ್ಷೇತ್ರದಲ್ಲಿ ಗಮನಾರ್ಹ ಸಾಧನೆಗೈದ ತಸ್ಲೀಂ ಅವರನ್ನು ಸಹ ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಮಾತನಾಡಿ, ‘ವಿಕಸಿತ ಭಾರತ’ದ ಕನಸು ನನಸಾಗಬೇಕಾದರೆ ದೇಶದ ಭವಿಷ್ಯವಾಗಿರುವ ವಿದ್ಯಾರ್ಥಿಗಳಲ್ಲಿ ಶಿಸ್ತು ಕೇವಲ ನಿಯಮವಾಗಿರದೆ, ಅದು ಜೀವನ ಪದ್ಧತಿಯಾಗಬೇಕು. ವ್ಯಕ್ತಿಗಿಂತ ರಾಷ್ಟ್ರವೇ ಮುಖ್ಯ ಎಂಬ ಭಾವನೆ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಬೆಳೆದು, ಜವಾಬ್ದಾರಿಯುತ ನಾಗರಿಕರಾಗಿ ಹೊರಹೊಮ್ಮಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ರಶ್ಮಿತಾ ಜೈನ್, ಪ್ರಾಂಶುಪಾಲ ಪುಷ್ಪರಾಜ್ ಬಿ., ಉಪಪ್ರಾಂಶುಪಾಲ ಸುನಾದ್ ರಾಜ್ ಜೈನ್, ಮುಖ್ಯೋಪಾಧ್ಯಾಯ ಶಿವಪ್ರಸಾದ್ ಭಟ್ ಉಪಸ್ಥಿತರಿದ್ದರು. ಜಯಶೀಲ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ಕುಮಾರಿ ವೈಷ್ಣವಿ ವಂದಿಸಿದರು.













































































































