
ಬೆಂಗಳೂರು: ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿರುವ ಸಿಸಿಟಿವಿ ಕ್ಯಾಮೆರಾಗಳು 24 ಗಂಟೆಯೂ ಕಾರ್ಯನಿರ್ವಹಿಸಬೇಕು. ಒಂದು ನಿಮಿಷವೂ ಕ್ಯಾಮೆರಾ ಆಫ್ ಆಗದಂತೆ ನೋಡಿಕೊಳ್ಳಬೇಕು ಎಂದು ಕರ್ನಾಟಕ ಹೈಕೋರ್ಟ್ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ವೈಟ್‌ಫೀಲ್ಡ್ ಠಾಣೆಯಲ್ಲಿ ಕಿರುಕುಳದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ವೇಳೆ, 11 ತಿಂಗಳಿಂದ ಯುಪಿಎಸ್ ಸಮಸ್ಯೆಯಿಂದ ಸಿಸಿಟಿವಿ ಕೆಲಸ ಮಾಡುತ್ತಿಲ್ಲ ಎಂದು ಪೊಲೀಸರು ತಿಳಿಸಿದ್ದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಲಯ, ಇಂತಹ ಉತ್ತರದಿಂದ ಪೊಲೀಸ್ ಇಲಾಖೆಯ ಮೇಲಿನ ಸಾರ್ವಜನಿಕರ ನಂಬಿಕೆ ಕುಸಿಯುತ್ತದೆ ಎಂದು ಹೇಳಿದೆ.
ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಹೈಕೋರ್ಟ್ ಸೂಚಿಸಿದೆ. ರಾಜ್ಯದ ಎಲ್ಲ ಠಾಣೆಗಳ ಸಿಸಿಟಿವಿ ಕಾರ್ಯನಿರ್ವಹಣೆ ಮತ್ತು ರೆಕಾರ್ಡಿಂಗ್ ಸ್ಥಿತಿಯನ್ನು ಡಿಜಿ-ಐಜಿಪಿ ಕಚೇರಿಯಿಂದಲೇ ರಿಯಲ್‌ಟೈಮ್‌ನಲ್ಲಿ ಮೇಲ್ವಿಚಾರಣೆ ಮಾಡುವ ವ್ಯವಸ್ಥೆ ಕಲ್ಪಿಸುವಂತೆ ನಿರ್ದೇಶನ ನೀಡಿದೆ.



















































































