
ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಶುಕ್ರವಾರ ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನ ನೀಡಲು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಸಭೆಯ ಬಳಿಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿಎಂ, ಸುಮಾರು 60 ವಿಷಯಗಳ ಕುರಿತು ಚರ್ಚೆ ನಡೆದಿದ್ದು, ತುಳುವಿಗೆ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ತೀರ್ಮಾನವನ್ನು ಪ್ರಕಟಿಸಿದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯ ಜನರು ತುಳುವನ್ನು ಮಾತೃಭಾಷೆಯಾಗಿ ಬಳಸುತ್ತಿರುವುದನ್ನು ಗಮನಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
“ಹಿಂದಿನ ಸರ್ಕಾರಗಳು ಯಾಕೆ ಮಾಡಲಿಲ್ಲ ಎಂದು ನಾನು ಪ್ರಶ್ನಿಸುವುದಿಲ್ಲ. ನಮಗೆ ಬದ್ಧತೆ ಇದೆ. ನಾವು ಭಾವನೆಗಳ ಮೇಲೆ ರಾಜಕಾರಣ ಮಾಡುವುದಿಲ್ಲ, ಬದ್ಧತೆಯ ಮೇಲೆ ಮಾಡುತ್ತೇವೆ” ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
“ಯು.ಟಿ. ಖಾದರ್ ಅವರು ಸ್ಪೀಕರ್ ಆಗಿದ್ದಾಗ ಮೊದಲ ಪ್ರಶ್ನೆಯನ್ನೇ ತುಳು ಭಾಷೆ ಬಗ್ಗೆ ಎತ್ತಿದ್ದರು. ಈ ಬೇಡಿಕೆ ಇಟ್ಟ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ” ಎಂದರು.
ಇದೇ ವೇಳೆ ಮಂಗಳೂರು ಜಿಲ್ಲೆಯ ಹೆಸರಿನ ವಿಚಾರವನ್ನು ಒಂದು ತಿಂಗಳ ಕಾಲ ಸಾರ್ವಜನಿಕ ಚರ್ಚೆಗೆ ಬಿಡಲಾಗಿದೆ. ಜನರ ಅಭಿಪ್ರಾಯ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು.






























































































































