
ಬೆಂಗಳೂರು: ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡಗಳ (ST) ಮೀಸಲಾತಿ ಪ್ರಮಾಣವನ್ನು ಶೇ. 50ರಿಂದ ಶೇ. 56ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಮೀಸಲಾತಿ ಹೆಚ್ಚಳಕ್ಕೆ ಸೂಕ್ತ ಸಂವಿಧಾನ ಬಾಹಿರ ಎಂದು ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.
ಸರ್ಕಾರದ ಆದೇಶ ರದ್ದು
ಮೀಸಲಾತಿ ಹೆಚ್ಚಳ ಪ್ರಶ್ನಿಸಿ ಮಹೇಂದ್ರ ಕುಮಾರ್ ಮಿಶ್ರಾ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರನ್ನೊಳಗೊಂಡ ವಿಭಾಗೀಯ ನ್ಯಾಯಪೀಠ ಈ ಆದೇಶ ಹೊರಡಿಸಿದೆ.
ಶೇ. 50ರಿಂದ ಶೇ. 56ಕ್ಕೆ ಏರಿಕೆ
ರಾಜ್ಯದ ಶಿಕ್ಷಣ ಸಂಸ್ಥೆಗಳ ಪ್ರವೇಶಾತಿ ಹಾಗೂ ಸರ್ಕಾರಿ ಉದ್ಯೋಗಗಳ ನೇಮಕಾತಿಯಲ್ಲಿ ಎಸ್‌ಸಿ ಮೀಸಲಾತಿಯನ್ನು ಶೇ. 15ರಿಂದ ಶೇ. 17ಕ್ಕೆ ಮತ್ತು ಎಸ್‌ಟಿ ಮೀಸಲಾತಿಯನ್ನು ಶೇ. 3ರಿಂದ ಶೇ. 7ಕ್ಕೆ ಹೆಚ್ಚಿಸಲಾಗಿತ್ತು. ಇದರಿಂದ ರಾಜ್ಯದಲ್ಲಿ ಒಟ್ಟು ಮೀಸಲಾತಿ ಪ್ರಮಾಣ ಶೇ. 56ಕ್ಕೆ ಏರಿಕೆಯಾಗಿತ್ತು.
ಮೀಸಲಾತಿ ಹೆಚ್ಚಳಕ್ಕೆ ಕಾನೂನು ರಕ್ಷಣೆ ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಈ ಹಿಂದೆ ಈ ಕಾಯ್ದೆಯನ್ನು ಸಂವಿಧಾನದ 9ನೇ ಶೆಡ್ಯೂಲ್‌ಗೆ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ, ಮೀಸಲಾತಿ ಪ್ರಮಾಣ ಶೇ. 50ರ ಮಿತಿಯನ್ನು ಮೀರಿರುವುದನ್ನು ಪ್ರಶ್ನಿಸಿದ ಅರ್ಜಿಯ ವಿಚಾರಣೆ ಬಳಿಕ ಹೈಕೋರ್ಟ್ ಸರ್ಕಾರದ ಆದೇಶವನ್ನು ರದ್ದುಗೊಳಿಸಿದೆ.






















