ರಾಜ್ಯಮಟ್ಟದ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಅಕ್ಟೋಬರ್ 24 ರಂದು ಸ್ವಾಗತ ಮೆರವಣಿಗೆ ಹಾಗೂ ಸನ್ಮಾನ ಕಾರ್ಯಕ್ರಮ

ಕಾರ್ಕಳ: ರಾಜ್ಯ ಶಿಕ್ಷಣ ಇಲಾಖೆ ನಡೆಸುವ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿಯರು ಸಾಧನೆಯ ಹೊಸ ಮೈಲುಗಲ್ಲನ್ನು ಸ್ಥಾಪಿಸಿದ್ದಾರೆ. ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ ಹಾಗೂ ಜಿಲ್ಲಾ ಪಂಚಾಯತ್, ಉತ್ತರ ಕನ್ನಡ ಜಿಲ್ಲೆ ಇವರ ವತಿಯಿಂದ ಕುಮಟಾದ ಗಿಬ್ ಪ್ರೌಢಶಾಲೆಯಲ್ಲಿ ನಡೆದ ಪ್ರಾಥಮಿಕ ವಿಭಾಗದ 14ರ ವಯೋಮಿತಿಯ ರಾಜ್ಯಮಟ್ಟದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ. ತಂಡವನ್ನು ಏಳನೇ ತರಗತಿಯ ತ್ರಿಷ್ಮ, ಸೃಷ್ಟಿ ಎಸ್. ಪೂಜಾರಿ, ಕೇಟ್ಲಿನ್ ಏಂಜಲ್ ಪಿಂಟೊ, ಎಲ್ಸಿ ರುಬೇಲ್ ಡಿಸೋಜ, ಪ್ರನ್ವಿ ಎಸ್. ದೇವಾಡಿಗ ಹಾಗೂ ಆರನೇ ತರಗತಿಯ ನಿಶಾ ಡಿಸೋಜ ಮತ್ತು ಅಲಿಶಾ ಡಿಸೋಜ ಪ್ರತಿನಿಧಿಸಿದ್ದರು. ಈ ಅಪೂರ್ವ ಸಾಧನೆಗೈದ ವಿದ್ಯಾರ್ಥಿನಿಯರನ್ನು ಸಂಸ್ಥೆಯ ಆಡಳಿತ ಮಂಡಳಿ, ಮುಖ್ಯಸ್ಥರು ಹಾಗೂ ಶಿಕ್ಷಕರು ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.

ಸಾಧಕ ವಿದ್ಯಾರ್ಥಿನಿಯರ ಯಶಸ್ಸನ್ನು ಅವಿಸ್ಮರಣೀಯಗೊಳಿಸುವ ನಿಟ್ಟಿನಲ್ಲಿ ಅಕ್ಟೋಬರ್ 24ರಂದು ವಿಜಯೋತ್ಸವ ಮೆರವಣಿಗೆ ಹಾಗೂ ಕ್ರೀಡಾಭಿಮಾನಿಗಳು ಮತ್ತು ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳ ವತಿಯಿಂದ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅಂದು ಕಾರ್ಕಳದ ಅನಂತಶಯನ ವೃತ್ತದಿಂದ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಯವರೆಗೆ ಅದ್ದೂರಿ ವಿಜಯೋತ್ಸವ ಮೆರವಣಿಗೆ ನಡೆಯಲಿದ್ದು, ಬಳಿಕ ಸಂಸ್ಥೆಯ ಸಭಾಂಗಣದಲ್ಲಿ ಸನ್ಮಾನ ಕಾರ್ಯಕ್ರಮ ಜರುಗಲಿದೆ. ಈ ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಪಟು ರೋಹಿತ್ ಕುಮಾರ್ ಕಟೀಲು, ಕ್ರೀಡಾ ಕ್ಷೇತ್ರದ ಸಾಧಕರು, ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕ್ರೀಡಾ ಸಂಯೋಜನಾಧಿಕಾರಿಗಳು ಹಾಗೂ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯವರು ಭಾಗವಹಿಸಲಿದ್ದಾರೆ.






















