ಮೆಡಿಕಲ್ ವಿದ್ಯಾರ್ಥಿ ಸಾವು, ನಾಲ್ವರಿಗೆ ಗಂಭೀರ ಗಾಯ

ತೀರ್ಥಹಳ್ಳಿ: ಆಗುಂಬೆ ಸಮೀಪದ ಕೌರಿಹಕ್ಕು ಬಳಿ ರವಿವಾರ ಬೆಳಗ್ಗೆ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಮೆಡಿಕಲ್ ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೆಗ್ಗಾನ್ ಆಸ್ಪತ್ರೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಯಚೂರು ಜಿಲ್ಲೆಯ ಚೇತನ್ (28) ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಐವರು ಮೆಡಿಕಲ್ ವಿದ್ಯಾರ್ಥಿಗಳು ಆಗುಂಬೆ ಪ್ರವಾಸಕ್ಕೆ ಬಂದಿದ್ದು ಈ ವೇಳೆ, ನಿದ್ರೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಗೆ ಅಪ್ಪಳಿಸಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಗಾಯಾಳುಗಳನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಆಗುಂಬೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳ ಹೆಚ್ಚಿನ ವಿವರ ಇನ್ನಷ್ಟೇ ತಿಳಿದು ಬರಬೇಕಿದೆ.
























