ವಿವಾದಾತ್ಮಕ ಹೇಳಿಕೆ ನೀಡಿ ಕೊನೆಗೂ ಕ್ಷಮೆಯಾಚಿಸಿದ ಬಿ ವೈ ವಿಜಯೇಂದ್ರ

ಬೆಂಗಳೂರು: ಕಾಂಗ್ರೆಸ್ ನಾಯಕರ ವಿರುದ್ಧ ಏಕವಚನದಲ್ಲಿ ಮಾತನಾಡಿ ವಿವಾದಕ್ಕೆ ಕಾರಣವಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಇದೀಗ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡುವ ವೇಳೆ “ಈ ನನ್ನ ಮಕ್ಕಳು ಕಾಂಗ್ರೆಸ್ ನವರು ಇದ್ದಾರಲ್ಲಾ…” ಎಂದು ಪದ ಬಳಸಿದ್ದನ್ನು ಒಪ್ಪಿಕೊಂಡಿರುವ ಅವರು, ಉದ್ದೇಶಪೂರ್ವಕವಾಗಿ ಆ ರೀತಿ ಮಾತನಾಡಿಲ್ಲ. ತಮ್ಮ ಹೇಳಿಕೆಯಿಂದ ಕಾಂಗ್ರೆಸ್ ನಾಯಕರಿಗೆ ನೋವಾಗಿದ್ದರೆ ಕ್ಷಮೆ ಕೋರುವುದಾಗಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ವಿಜಯೇಂದ್ರ ಅವರು ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ. ನರೇಂದ್ರ ಮೋದಿ ಪ್ರಧಾನಿಯಾಗಿರುವುದನ್ನು ಕಾಂಗ್ರೆಸ್ಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ದೇಶದ ಜನರು ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿದ್ದರೂ ರಾಹುಲ್ ಗಾಂಧಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ನ ಪ್ರಜಾಪ್ರಭುತ್ವ ವಿರೋಧಿ ನಡೆ ಖಂಡಿಸಿ ಇಂದು ಕೋಲಾರದಲ್ಲಿ ಅಭಿಯಾನ ನಡೆಸಲಾಗುವುದು ಎಂದು ಹೇಳಿದರು.
ಇತ್ತೀಚೆಗೆ ರಾಜ್ಯ ಸರ್ಕಾರದ ಮೀಸಲಾತಿ ಹೆಚ್ಚಳದ ವಿಚಾರ ಹಾಗೂ ಹಾಲಿನ ದರ ಏರಿಕೆ ಕುರಿತು ದಾವಣಗೆರೆಯಲ್ಲಿ ಮಾತನಾಡಿದ್ದ ವಿಜಯೇಂದ್ರ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ “ಈ ನನ್ನ ಮಕ್ಕಳು ಕಾಂಗ್ರೆಸ್ನವರು ಇದ್ದಾರಲ್ಲಾ…” ಎಂದು ಏಕವಚನದಲ್ಲಿ ಹೇಳಿಕೆ ನೀಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು.
ವಿಜಯೇಂದ್ರ ಅವರ ಪದಪ್ರಯೋಗಕ್ಕೆ ಕಾಂಗ್ರೆಸ್ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮೂರು ದಿನಗಳೊಳಗೆ ವಿಜಯೇಂದ್ರ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಪಟ್ಟಿ ಪ್ರದರ್ಶಿಸಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದರು.
ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರ ನಿವಾಸದ ಮುಂದೆ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಬಹಿರಂಗವಾಗಿ ಭಿತ್ತಿಪತ್ರ ಅಂಟಿಸಿ ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದ. ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು ಇದೀಗ ವಿವಾದದ ಬೆನ್ನಲ್ಲೇ ವಿಜಯೇಂದ್ರ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ.

























