
ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ ಇವರ ಆಶ್ರಯದಲ್ಲಿ ಕ್ರೈಸ್ಟ್ ಕಿಂಗ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ವಿಜ್ಞಾನ ಮಾದರಿ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಗಿರಿಜಮ್ಮ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಅವರು ದೀಪ ಬೆಳಗಿಸುವ ಮೂಲಕ ಸ್ಪರ್ಧೆಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, “ವಿದ್ಯಾರ್ಥಿಗಳು ವಿಜ್ಞಾನದ ಪ್ರಯೋಗಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಾಗ ಅವರಲ್ಲಿ ಕುತೂಹಲದ ಜೊತೆಗೆ ವೈಜ್ಞಾನಿಕ ಮನೋಭಾವ ಬೆಳೆಯುತ್ತದೆ. ಇಂತಹ ಸೃಜನಶೀಲ ಆಲೋಚನೆಗಳೇ ಮುಂದೆ ಹೊಸ ಆವಿಷ್ಕಾರಗಳಿಗೆ ದಾರಿಯಾಗುತ್ತವೆ” ಎಂದು ಹೇಳಿದರು.
ಇನ್ನೋರ್ವ ಅತಿಥಿಗಳಾದ ಕಾರ್ಕಳ ತಾಲೂಕು ಮಟ್ಟದ ವಿಜ್ಞಾನ ವಸ್ತುಪ್ರದರ್ಶನ ಸ್ಪರ್ಧೆಯ ಸಂಯೋಜಕರು ಹಾಗೂ ಪೆರ್ವಾಜೆ ಸುಂದರ ಪುರಾಣಿಕ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕರಾದ ಬಾಲಕೃಷ್ಣ ನಾಯಕ್ ಅವರು ಮಾತನಾಡಿ, “ಇಂದಿನ ವಿಜ್ಞಾನ ಮಾದರಿ ಪ್ರದರ್ಶನ ಸ್ಪರ್ಧೆಯಲ್ಲಿ ವಿವಿಧ ಶಾಲೆಗಳಿಂದ ಆಗಮಿಸಿರುವ ವಿದ್ಯಾರ್ಥಿಗಳು ಶ್ರಮವಹಿಸಿ ಮಾದರಿಗಳನ್ನು ತಯಾರಿಸಿಕೊಂಡು ಬಂದಿದ್ದೀರಿ. ನೀವು ತಯಾರಿಸಿದ ಮಾದರಿಗಳು ನಿಮ್ಮಲ್ಲಿರುವ ಕೌಶಲ್ಯ ಹಾಗೂ ಸೃಜನಶೀಲತೆಯನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ” ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ರೈಸ್ಟ್ ಕಿಂಗ್ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಅವೆಲಿನ್ ಲೂಯಿಸ್ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಜೋಸ್ನ ಸ್ನೇಹಲತಾ ಅವರು ಪ್ರಸ್ತಾವನೆಗೈದರು. ಕ್ಷೇತ್ರ ಸಮನ್ವಯಾಧಿಕಾರಿ ಶ್ರೀಮತಿ ಇಂದಿರಾ, ಸಾಣೂರು ವಲಯದ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಜ್ಯೋತಿ, ನಿಕಟಪೂರ್ವ ಕ್ಷೇತ್ರ ಸಂಪನ್ಮೂಲ ಅಧಿಕಾರಿ ಸಂತೋಷ್ ಶೆಟ್ಟಿ, ಸಂಸ್ಥೆಯ ಹಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕ ಐ. ಕ್ರಿಸ್ಟೋಫರ್ ಕೋಟ್ಯಾನ್, ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಸಿಸ್ಟರ್ ಜಾಲಿ ಜೇಕಬ್ ಹಾಗೂ ಪ್ರೌಢಶಾಲಾ ವಿಭಾಗದ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ವಿಶ್ವನಾಥ ಪೂಜಾರಿ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರೌಢಶಾಲಾ ಶಿಕ್ಷಕಿಯರಾದ ಶ್ರೀಮತಿ ರೇಖಾ ಸಂತೋಷ್ ಅವರು ಸ್ವಾಗತಿಸಿ, ಶ್ರೀಮತಿ ಶ್ರುತಿರಾಜ್ ಅವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

























