
ದಾವಣಗೆರೆ: ಕಾಂಗ್ರೆಸ್ ಪಕ್ಷದಲ್ಲೇ ಕೆಲವರು ಮೋಸ ಮಾಡುತ್ತಿದ್ದು, ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡುತ್ತಿದ್ದಾರೆ. ಪಕ್ಷದ ಅನ್ನ ತಿನ್ನುವವರು ನಿಷ್ಠೆಯಿಂದ ಇರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಸ್ವಪಕ್ಷದ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದಾವಣಗೆರೆಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಪಕ್ಷದೊಳಗಿನ ಭಿನ್ನಾಭಿಪ್ರಾಯ ಮತ್ತು ಆಂತರಿಕ ಕಚ್ಚಾಟದ ವಿರುದ್ಧ ಬಹಿರಂಗವಾಗಿಯೇ ಕಿಡಿಕಾರಿದರು.
ನಮಗೆ ಹೊರಗಿನ ಶತ್ರುಗಳಿಲ್ಲ. ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಚುನಾವಣೆ ಗೆಲ್ಲುವುದು ಸುಲಭ. ಆದರೆ, ನಮ್ಮವರೇ ನಮಗೆ ಶತ್ರುಗಳಾಗುತ್ತಿದ್ದಾರೆ. ಯಾವ ನಾಯಕರು ಏನು ಮಾಡುತ್ತಿದ್ದಾರೆ ಎಂಬುದು ನನಗೆ ಚೆನ್ನಾಗಿ ತಿಳಿದಿದೆ ಎಂದು ಹೇಳಿದರು.
ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇರಬಾರದು. ಬಡವರಿಗೆ ಉತ್ತಮ ಸೌಲಭ್ಯಗಳು ಸಿಗಬೇಕಾದರೆ ಕಾಂಗ್ರೆಸ್ ಅಧಿಕಾರದಲ್ಲಿರಬೇಕು. ಹೀಗಾಗಿ ಎಲ್ಲರೂ ಪಕ್ಷದ ಹಿತದೃಷ್ಟಿಯಿಂದ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಕರೆ ನೀಡಿದರು.
ಇದೇ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ಖಲೀಲವುಲ್ಲಾ ಅವರಿಗೆ ಸಲಹೆ ನೀಡಿದ ಅವರು, ಈಗಲೇ ಶಾಸಕ ಅಥವಾ ವಿಧಾನಪರಿಷತ್ ಸದಸ್ಯರಾಗುವ ಆಸೆ ಬೇಡ. ಪಕ್ಷಕ್ಕೆ ನಿಷ್ಠೆಯಿಂದ ದುಡಿದರೆ ಅಧಿಕಾರ ತಾನಾಗಿಯೇ ಹುಡುಕಿಕೊಂಡು ಬರುತ್ತದೆ ಎಂದು ಕಿವಿಮಾತು ಹೇಳಿದರು.






















































































