
ಬೆಂಗಳೂರು:ಶಾಲಾ ಮಕ್ಕಳ ಮುಂದೆ ದ್ವೇಷದ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸೂಚನೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಸಚಿವರು, ರಾಜಕಾರಣವನ್ನು ರಾಜಕೀಯ ವೇದಿಕೆಗಳಿಗೆ ಮಾತ್ರ ಸೀಮಿತಗೊಳಿಸಬೇಕು. ಶಾಲೆಗಳಲ್ಲಿ ಈ ರೀತಿಯ ಹೇಳಿಕೆಗಳನ್ನು ನೀಡುವುದು ಸರಿಯಲ್ಲ. ಶಾಸಕರಿಗೆ ಕನಿಷ್ಠ ಸಾಮಾನ್ಯ ತಿಳುವಳಿಕೆ ಇರಬೇಕಲ್ಲವೇ? ಮನಸ್ಸಿನಲ್ಲಿರುವ ವಿಷವನ್ನೇ ಕೆಲವರು ಹೊರಹಾಕುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಾಸಕರು ಶಾಲೆಯಲ್ಲಿ ಏನು ಮಾತನಾಡಿದ್ದಾರೆ ಎಂಬ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ವರದಿಯ ಆಧಾರದ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ದೂರು ನೀಡಲು ಮುಂದಾದರೆ ಸ್ವಾಗತಿಸುತ್ತೇವೆ. ಆದರೆ, ದೂರುಗಳಿಗಾಗಿ ಕಾಯದೆ ಶಿಕ್ಷಣ ಇಲಾಖೆಯಿಂದಲೇ ಕ್ರಮ ಜರುಗಿಸಲಾಗುವುದು ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.






















































































