ಮುಂದಿನ ಶೈಕ್ಷಣಿಕ ವರ್ಷದಿಂದ ಉಚಿತ ಬಸ್ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಸಿರಾ ತಾಲೂಕಿನ ಚಿಕ್ಕನಹಳ್ಳಿಯ ಕರ್ನಾಟಕ ಪಬ್ಲಿಕ್ ಶಾಲೆಗೆ ಸೋಮವಾರ ಭೇಟಿ ನೀಡಿ, ಶೈಕ್ಷಣಿಕ ಚಟುವಟಿಕೆ ಹಾಗೂ ಮೂಲಸೌಕರ್ಯಗಳನ್ನು ಪರಿಶೀಲಿಸಿ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮುಂದಿನ ವರ್ಷದ ಜೂನ್‌ನಿಂದ ರಾಜ್ಯದ ಎಲ್ಲಾ ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ (ಕೆಪಿಎಸ್) ಉಚಿತ ಬಸ್ ಸೌಲಭ್ಯ ಕಲ್ಪಿಸಲಾಗುವುದು ಎಂದು ಘೋಷಿಸಿದ್ದಾರೆ.
ನೆರೆಯ ಗ್ರಾಮಗಳಿಂದ ಬರುವ ವಿದ್ಯಾರ್ಥಿಗಳು ಬಸ್ ಸೌಲಭ್ಯವಿಲ್ಲದೆ ಶಾಲೆಗೆ ಸಮಯಕ್ಕೆ ತಲುಪಲು ತೊಂದರೆಯಾಗುತ್ತಿದೆ ಎಂದು ಸಚಿವರ ಬಳಿ ಸಮಸ್ಯೆ ಹೇಳಿಕೊಂಡರು. ಇದಕ್ಕೆ ಸ್ಪಂದಿಸಿದ ಅವರು, ಮುಂದಿನ ಶೈಕ್ಷಣಿಕ ವರ್ಷದಿಂದಲೇ ಬಸ್ ಸೇವೆ ಆರಂಭಿಸುವುದಾಗಿ ತಿಳಿಸಿದರು.
ರಾಜ್ಯದ ಕೆಪಿಎಸ್ ಶಾಲೆಗಳ ಅಭಿವೃದ್ಧಿ ಮತ್ತು ಉನ್ನತೀಕರಣಕ್ಕಾಗಿ ರಾಜ್ಯ ಸರ್ಕಾರವು ವಿವಿಧ ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಗಳು, ಪ್ರಾದೇಶಿಕ ಅಭಿವೃದ್ಧಿ ಮಂಡಳಿಗಳು, ಕಾರ್ಪೊರೇಟ್ ಸಂಸ್ಥೆಗಳ ಮೂಲಕ ಅನುದಾನ ಸಂಗ್ರಹಿಸಲಾಗುತ್ತಿದೆ. ಈ ಯೋಜನೆಗೆ ಏಷ್ಯನ್ ಅಭಿವೃದ್ಧಿ ಬ್ಯಾಂಕ್ (ಎಡಿಬಿ) 2,500 ಕೋಟಿ ರೂ. ನೆರವು ನೀಡಲಿದ್ದು, ಪ್ರತಿ ಶಾಲೆಗೆ ಸರಾಸರಿ 2ರಿಂದ 4 ಕೋಟಿ ರೂ. ವೆಚ್ಚ ಮಾಡಲಾಗುವುದು ಎಂದರು.
ಕೆಪಿಎಸ್ ಶಾಲೆಗಳ ವಿಸ್ತರಣೆ ಮತ್ತು ಅಭಿವೃದ್ಧಿಗೆ ಡಿಪಿಆರ್ ಸಿದ್ಧಪಡಿಸಲಾಗಿದೆ. ಯೋಜನೆಯ ಉದ್ಘಾಟನೆಗೆ ಮುಖ್ಯಮಂತ್ರಿಗಳನ್ನು ಆಹ್ವಾನಿಸುವ ವಿಶ್ವಾಸವಿದೆ. ಶಾಲೆಗಳಲ್ಲಿ ಸುಸಜ್ಜಿತ ಕಟ್ಟಡ, ಸ್ಮಾರ್ಟ್ ಕ್ಲಾಸ್, ವಿಜ್ಞಾನ ಮತ್ತು ಕಂಪ್ಯೂಟರ್ ಪ್ರಯೋಗಾಲಯ, ಗ್ರಂಥಾಲಯ, ಶುದ್ಧ ಕುಡಿಯುವ ನೀರು ಹಾಗೂ ಉತ್ತಮ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು.
ರಾಜ್ಯದ 1,600 ಕೆಪಿಎಸ್ ಶಾಲೆಗಳ ವಿದ್ಯಾರ್ಥಿಗಳಿಗೆ ಜೂನ್‌ನಿಂದ ಉಚಿತ ಸಾರಿಗೆ ವ್ಯವಸ್ಥೆ ಜಾರಿಯಾಗಲಿದೆ. ಇದೇ ವೇಳೆ, ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದ ಸಿಇಟಿ ಪರೀಕ್ಷೆಯ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.























































































