
ಬೆಂಗಳೂರು: 2028ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಎನ್ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಭಾಗದ ಪ್ರತಿ ಮಹಿಳೆಗೆ ಎರಡು ಹಸುಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.
ಗುರುವಾರ ಬೆಂಗಳೂರಿನ ಜೆಡಿಎಸ್ ಪ್ರಧಾನ ಕಚೇರಿ ಜೆಪಿ ಭವನದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬಂದರೆ ಗ್ರಾಮೀಣ ಮಹಿಳೆಯರಿಗೆ ಎರಡು ಹಸುಗಳನ್ನು ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದರು.
ಇದೇ ವೇಳೆ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಚಿಕ್ಕ ಮಕ್ಕಳೊಂದಿಗೆ ಆಶಾ ಕಾರ್ಯಕರ್ತೆಯರು ಹೋರಾಟ ನಡೆಸುತ್ತಿದ್ದರೂ ಅವರ ಬೇಡಿಕೆ ಈಡೇರಿಸಲು ಸರ್ಕಾರ ಹಿಂದೇಟು ಹಾಕುತ್ತಿದೆ. ಭಾರತ್ ಜೋಡೋ ಸಂಘಗಳ ಹೆಸರಿನಲ್ಲಿ ಪ್ರತಿ ಪಂಚಾಯತ್ಗೆ ತಲಾ 10 ಲಕ್ಷ ರೂ.ನಂತೆ ಒಟ್ಟು 1,000 ಕೋಟಿ ರೂ. ನೀಡಲು ಮುಂದಾಗಿರುವ ಸರ್ಕಾರಕ್ಕೆ ಆಶಾ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸಲು 350 ಕೋಟಿ ರೂ. ನೀಡಲು ಸಾಧ್ಯವಿಲ್ಲವೇ ಎಂದು ಪ್ರಶ್ನಿಸಿದರು.
2018ರಲ್ಲಿ ರೈತರ ಸಾಲಮನ್ನಾ ಮಾಡಿದ ಸಂದರ್ಭದಲ್ಲಿಯೇ ಆಶಾ ಕಾರ್ಯಕರ್ತೆಯರ ಗೌರವಧನವನ್ನು 1,000 ರೂ. ಹೆಚ್ಚಳ ಮಾಡಿದ್ದೇನೆ ಎಂದು ಅವರು ನೆನಪಿಸಿಕೊಂಡರು.
ಇನ್ನು ಸಾಕ್ಷಿಗುಡ್ಡೆ ಬಿಟ್ಟು ಹೋಗುವಂತೆ ಮುಖ್ಯಮಂತ್ರಿ ಹೇಳುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, “ನನ್ನ ಸಾಕ್ಷಿಗುಡ್ಡೆ ಇರಲಿ, ನಿಮ್ಮ ಸಾಕ್ಷಿಗುಡ್ಡೆ ಎಲ್ಲಿದೆ?” ಎಂದು ತಿರುಗೇಟು ನೀಡಿದರು.

























































































