
ಮಂಗಳೂರು: ದಿನದಿಂದ ದಿನಕ್ಕೆ ಮಳೆರಾಯನ ಆರ್ಭಟ ಜೋರಾಗುತ್ತಿದ್ದು ಪರಿಣಾಮ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಗುಡ್ಡ ಕುಸಿದಿದೆ. ಇದರಿಂದ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ. ಸದ್ಯ ಮಣ್ಣು ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದ್ದು ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲ ಎಂಬಲ್ಲಿ ಹೆದ್ದಾರಿ ಮೇಲೆ ಶುಕ್ರವಾರ ಮುಂಜಾನೆ ಗುಡ್ಡ ಕುಸಿದು ಬಿದ್ದಿದೆ. ಹೀಗಾಗಿ ರಸ್ತೆ ಸಂಪರ್ಕ ಕಡಿತಗೊಂಡಿದ್ದು ಸದ್ಯ ಮಡಿಕೇರಿ ಹಾಗೂ ಮೈಸೂರು ಕಡೆಗೆ ಪ್ರಯಾಣಿಸುವವರಿಗೆ ಬದಲಿ ರಸ್ತೆಯಾಗಿ ಪುತ್ತೂರು ಸಿಟಿ ಮೂಲಕ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡಲಾಗಿದೆ.
ಹೀಗಾಗಿ ಇಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೆರೆ, ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಮಳೆ ಹಾನಿ ಪ್ರದೇಶಗಳ ಭೇಟಿ ಬಳಿಕ ಅಧಿಕಾರಿಗಳ ಸಭೆ ನಡೆಸಲಿದ್ದು ಈ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯ, ಮುಂಜಾಗ್ರತಾ ಕ್ರಮ ಕೈಗೊಳ್ಳುವ ಬಗ್ಗೆ ಸಭೆ ನಡೆಸಲಿದ್ದಾರೆ.













