3 ತಿಂಗಳಲ್ಲಿ ಹೊಸ ಆ್ಯಪ್ ಬಿಡುಗಡೆ

ಬೆಂಗಳೂರು: ಹೋಟೆಲ್ಗಳು ಮತ್ತು ರೆಸ್ಟೋರೆಂಟ್ಗಳಲ್ಲಿ ಅಡುಗೆಗೆ ಬಳಸಿದ ಎಣ್ಣೆಯನ್ನು ಮರುಬಳಕೆ ಮಾಡುವುದನ್ನು ತಡೆಗಟ್ಟಲು ಮೂರು ತಿಂಗಳೊಳಗೆ ಹೊಸ ಮೊಬೈಲ್ ಆ್ಯಪ್ ಬಿಡುಗಡೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೋಟೆಲ್ಗಳು ಮತ್ತು ರೆಸ್ಟೋರೆಂಟ್ಗಳು ದೊಡ್ಡ ಪ್ರಮಾಣದಲ್ಲಿ ಖರೀದಿಸುವ ಅಡುಗೆ ಎಣ್ಣೆಯ ಬಳಕೆಯ ಮೇಲೆ ನಿಗಾ ಇಡುವುದು ಆ್ಯಪ್ನ ಪ್ರಮುಖ ಉದ್ದೇಶವಾಗಿದೆ. ಬಳಸಿದ ಎಣ್ಣೆಯನ್ನು ಮತ್ತೆ ಬಳಸುವುದರಿಂದ ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಬಹುದು ಎಂದು ಎಚ್ಚರಿಸಿದರು.
ಆರೋಗ್ಯ ಸಚಿವನಾಗಿ ಆಸ್ಪತ್ರೆಗಳ ಸಂಖ್ಯೆಯನ್ನು ಹೆಚ್ಚಿಸುವುದಕ್ಕಿಂತ ರೋಗಿಗಳ ಸಂಖ್ಯೆಯನ್ನು ಕಡಿಮೆ ಮಾಡುವುದು ನನ್ನ ಗುರಿ. ಮುಂದಿನ 10 ವರ್ಷಗಳಲ್ಲಿ ಜನರ ಆರೋಗ್ಯ ಸುಧಾರಣೆ ಹಾಗೂ ಅನಾರೋಗ್ಯವನ್ನು ತಡೆಗಟ್ಟಲು ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಆ್ಯಪ್ ಮೂಲಕ ಎಣ್ಣೆ ಖರೀದಿ ಮತ್ತು ಬಳಕೆಯ ಮಾಹಿತಿಯನ್ನು ಸಂಗ್ರಹಿಸಿ ಮೇಲ್ವಿಚಾರಣೆ ನಡೆಸಲಾಗುತ್ತದೆ. ಮೊದಲ ಹಂತದಲ್ಲಿ ಬೆಂಗಳೂರು, ಮೈಸೂರು, ಮಂಗಳೂರು ಮತ್ತು ಹುಬ್ಬಳ್ಳಿ ನಗರಗಳಲ್ಲಿ ಪ್ರಾಯೋಗಿಕವಾಗಿ ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದರು.






















































































