
ಕಾರ್ಕಳ: ಶ್ರೀ ಭುವನೇಂದ್ರ ಕಾಲೇಜು, ಕಾರ್ಕಳದ ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಗಣಕ ವಿಜ್ಞಾನ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಬೈಲೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಭೇಟಿಯ ಅಂಗವಾಗಿ ಗಣಕ ವಿಜ್ಞಾನ ವಿಭಾಗದ ಪರಿಚಯ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ. ಸ್ವಾತಿ ಕೆ. ಅವರು ಪೈಥಾನ್ ಪ್ರೋಗ್ರಾಮಿಂಗ್ ಕುರಿತು ಪರಿಚಯಾತ್ಮಕ ಗೋಷ್ಠಿ ನಡೆಸಿಕೊಟ್ಟು, ಪೈಥಾನ್ ಭಾಷೆಯ ಮೂಲ ಪರಿಕಲ್ಪನೆಗಳು, ಅದರ ಪ್ರಾಯೋಗಿಕ ಉಪಯೋಗಗಳು ಹಾಗೂ ಕಂಪ್ಯೂಟರ್ ವಿಜ್ಞಾನ ಕ್ಷೇತ್ರದಲ್ಲಿನ ಉದ್ಯೋಗಾವಕಾಶಗಳ ಕುರಿತು ಮಾಹಿತಿ ನೀಡಿದರು. ಬಳಿಕ ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕರು ಕಂಪ್ಯೂಟರ್ ಪ್ರಯೋಗಾಲಯದಲ್ಲಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಪ್ರೋಗ್ರಾಮಿಂಗ್ ಚಟುವಟಿಕೆಗಳನ್ನು ನಡೆಸಿಕೊಟ್ಟರು. ವಿದ್ಯಾರ್ಥಿಗಳು ಆಸಕ್ತಿಯಿಂದ ಭಾಗವಹಿಸಿ ಪ್ರಾಯೋಗಿಕ ಅನುಭವ ಪಡೆದರು.
ಈ ಸಂದರ್ಭದಲ್ಲಿ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ನಂದಕಿಶೋರ್ ಕೆ. ಅವರು ಕಾಲೇಜಿನಲ್ಲಿ ಲಭ್ಯವಿರುವ ಪದವಿ ಶಿಕ್ಷಣದ ವಿವಿಧ ಕೋರ್ಸ್ಗಳು, ಶೈಕ್ಷಣಿಕ ಸೌಲಭ್ಯಗಳು ಹಾಗೂ ಮೂಲಸೌಕರ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಮಂಜುನಾಥ ಎ. ಕೊಟ್ಯಾನ್, ಐಕ್ಯೂಎಸಿ ಸಂಯೋಜಕರಾದ ಶ್ರೀ ಲಕ್ಷ್ಮೀನಾರಾಯಣ ಕೆ. ಎಸ್. ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ವಿಜಯಕುಮಾರಿ ಉಪಸ್ಥಿತರಿದ್ದು ಮಾರ್ಗದರ್ಶನ ನೀಡಿದರು. ಬೈಲೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಶ್ರೀ ಸುರೇಶ್ ಮೂಲ್ಯ ಅವರು ಸಹ ಉಪಸ್ಥಿತರಿದ್ದರು. ಭೇಟಿಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕಾಲೇಜಿನ ವಿಜ್ಞಾನ ಪ್ರಯೋಗಾಲಯ, ಕಂಪ್ಯೂಟರ್ ಪ್ರಯೋಗಾಲಯ ಹಾಗೂ ಇತರ ಶೈಕ್ಷಣಿಕ ಸೌಲಭ್ಯಗಳನ್ನು ವೀಕ್ಷಿಸಿ ಮಾಹಿತಿ ಪಡೆದುಕೊಂಡರು. ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಪದವಿ ಶಿಕ್ಷಣದ ವಿವಿಧ ಅವಕಾಶಗಳು ಹಾಗೂ ಉನ್ನತ ಶಿಕ್ಷಣದ ಮಹತ್ವದ ಕುರಿತು ಅರಿವು ಮೂಡಿಸುವ ಉದ್ದೇಶ ಹೊಂದಿದ್ದು, ಇಂತಹ ಶೈಕ್ಷಣಿಕ ಭೇಟಿಗಳನ್ನು ಪ್ರತಿವರ್ಷವೂ ಮುಂದುವರಿಸಲಾಗುವುದು.






















































































