
ಕೊಪ್ಪಳ: ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಿದರೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳಲಿವೆ ಎಂದು ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ ನೀಡಿದ್ದಾರೆ.
ಕಾರಟಗಿಯಲ್ಲಿ ಶುಕ್ರವಾರ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಗೆ ಮತ ನೀಡಿದರೆ ಗೃಹಲಕ್ಷ್ಮಿ ಯೋಜನೆಯ ₹2,000, ಅನ್ನಭಾಗ್ಯ, ಸ್ತ್ರೀಶಕ್ತಿ ಉಚಿತ ಬಸ್ ಪ್ರಯಾಣ ಹಾಗೂ ಯುವನಿಧಿ ಸೇರಿದಂತೆ ಐದು ಗ್ಯಾರಂಟಿಗಳು ಶೇ.100ರಷ್ಟು ಬಂದ್ ಆಗಲಿವೆ ಎಂದು ಹೇಳಿದ್ದಾರೆ.
ಬಿಜೆಪಿಯವರು ಅದಾನಿ ಮತ್ತು ಅಂಬಾನಿಯಂತಹ ಉದ್ಯಮಿಗಳ ಸಾಲ ಮನ್ನಾ ಮಾಡುತ್ತಾರೆ. ಆದರೆ ಸಾಮಾನ್ಯ ಜನರು ಹಾಗೂ ರೈತರ ಸಾಲವನ್ನು ಏಕೆ ಮನ್ನಾ ಮಾಡುವುದಿಲ್ಲ? ರೈತರ ಬಗ್ಗೆ ನಿಜವಾದ ಕಾಳಜಿ ಇದ್ದರೆ ಅವರ ಸಾಲ ಮನ್ನಾ ಮಾಡಲಿ ಎಂದು ಸವಾಲು ಹಾಕಿದರು. ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದಂತೆ ತಮ್ಮ ಸರ್ಕಾರ ಅನುಷ್ಠಾನಗೊಳಿಸಿದೆ ಎಂದರು.
ಬಿಜೆಪಿಯವರು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಟೀಕಿಸಿದ್ದರು. ಆದರೆ ತಮ್ಮ ಸರ್ಕಾರ ಎಲ್ಲ ಭರವಸೆಗಳನ್ನು ಈಡೇರಿಸಿದೆ. ಸಚಿವನಾದ ಬಳಿಕವೂ ವಾರದಲ್ಲಿ ಎರಡರಿಂದ ಮೂರು ದಿನ ಕ್ಷೇತ್ರದಲ್ಲೇ ಇದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ ಎಂದು ಬಿಜೆಪಿ ಆರೋಪಿಸುತ್ತಿದೆ. ಹಾಗಿದ್ದರೆ, ಬಿಜೆಪಿ ಅಧಿಕಾರಕ್ಕೆ ಬಂದರೂ ಈ ಯೋಜನೆಗಳನ್ನು ಮುಂದುವರಿಸುತ್ತೇವೆ ಎಂದು ಘೋಷಿಸುವ ಧೈರ್ಯ ಇದೆಯೇ ಎಂದು ಸಚಿವ ಶಿವರಾಜ್ ತಂಗಡಗಿ ಪ್ರಶ್ನಿಸಿ, ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದರು.






















































































